ಬಂಡೀಪುರದಲ್ಲಿ ಬೇಟೆಗಾರರ ಬಂಧನ: ಎರಡು ಜೀವಂತ ಮೊಲಗಳ ರಕ್ಷಣೆ

ಚಾಮರಾಜನಗರ : ಕಾಡು ಪ್ರಾಣಿಗಳನ್ನು ಬೇಟೆಯಾಡಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ತಂಡದ ಮೇಲೆ ಅರಣ್ಯ ಇಲಾಖೆ ದಾಳಿ ನಡೆಸಿ, ಇಬ್ಬರು ಬೇಟೆಗಾರರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವಡ್ಡರಹಳ್ಳಿ ಸಮೀಪ ಗುರುವಾರ ಮುಂಜಾನೆ ನಡೆದಿದೆ.
ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಗುಂಡ್ಲುಪೇಟೆ ತಾಲ್ಲೂಕಿನ ವಡ್ಡರಹಳ್ಳಿ ಬಳಿ ಬನ್ನಿತಾಳಪುರ ಗ್ರಾಮದ ಶಿವಕುಮಾರ್ ಮತ್ತು ಮನೋಜ್ ಕುಮಾರ್ ಎಂಬವರು ಎರಡು ಜೀವಂತ ಮೊಲಗಳನ್ನು ಹಿಡಿದು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿದರು.
ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ, ಅವರಿಂದ ನಾಡಬಂದೂಕು, ದ್ವಿಚಕ್ರ ವಾಹನ ಹಾಗೂ ಹೆಡ್‌ಲೈಟ್ ವಶಪಡಿಸಿಕೊಳ್ಳಲಾಗಿದೆ. ಬೇಟೆಯಾಡಿ ಹಿಡಿದಿದ್ದ ಎರಡು ಜೀವಂತ ಮೊಲಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
ಪ್ರಕರಣದಲ್ಲಿ ಇನ್ನೂ ಮೂವರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು, ಅವರು ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಅರಣ್ಯ ಇಲಾಖೆ ವಿಶೇಷ ಕಾರ್ಯತಂತ್ರ ರೂಪಿಸಿ ಶೋಧ ಕಾರ್ಯ ಮುಂದುವರಿಸಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯಾಧಿಕಾರಿ ನಂದೀಶ್ ಅವರ ಮಾರ್ಗದರ್ಶನದಲ್ಲಿ, ವಿಶೇಷ ಹುಲಿ ಸಂರಕ್ಷಣಾ ದಳದ ಸಹಾಯಕ ಅರಣ್ಯಾಧಿಕಾರಿ ಮಂಜುನಾಥ್ ಹಾಗೂ ವಲಯ ಅರಣ್ಯಾಧಿಕಾರಿ ವೆಂಕಟೇಶ್ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.






