ನಾಳೆಯಿಂದ ಅಂತರ್ರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ : ಪುಟ್ಟರಂಗಶೆಟ್ಟಿ

ಚಾಮರಾಜನಗರ : ಚಾಮರಾಜನಗದಲ್ಲಿ ಅ.24 ಮತ್ತು 25ರಂದು ನಡೆಯಲಿರುವ ಅಂತರ್ರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನಕ್ಕೆ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಸಮ್ಮೇಳನದ ಯಶಸ್ಸಿಗೆ ಸಹಕರಿಸಿ ಎಂದು ರೇಷ್ಮೆ ಮತ್ತು ಪಶು ಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದ್ದಾರೆ.
ನಗರದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮೈಸೂರಿನಲ್ಲಿ ನಡೆದ ಅಂತರ್ರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿ ಮುಂದಿನ ವರ್ಷ ಜಿಲ್ಲೆಯಲ್ಲಿ ಸಮ್ಮೇಳನ ಆಯೋಜಿಸುವ ಸಂಬಂಧ ಧಮ್ಮ ಜ್ಯೋತಿಯನ್ನು ಸ್ವೀಕಾರ ಮಾಡಿದ್ದೆವು. ಅದರಂತೆ ಅ.24 ಮತ್ತು 25ರಂದು ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಬೌದ್ಧ ಸಮ್ಮೇಳನ ಆಯೋಜಿಸಲಾಗಿದೆ ಎಂದರು.
ಈ ಸಮ್ಮೇಳನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಅಂಬೇಡ್ಕರ್ ಮೊಮ್ಮಗ ಯಶವಂತ್ ರಾವ್ ಅಂಬೇಡ್ಕರ್, ಸಚಿವರು ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮೈಸೂರಿನ ಉರಿಲಿಂಗಪೆದ್ದಿ ಮಠದ ಪೀಠಾಧ್ಯಕ್ಷ ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ, ಬೌದ್ಧ ಸಮ್ಮೇಳನಕ್ಕೆ ಹಲವಾರು ದೇಶಗಳಿಂದ ಬೌದ್ಧ ಬಿಕ್ಕುಗಳು ಆಗಮಿಸಲಿದ್ದಾರೆ. ಅದಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸ್ಥಳೀಯ ಆಡಳಿತ ಅಗತ್ಯ ಸಹಕಾರವನ್ನು ನೀಡಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ, ಬೌದ್ಧ ಸಮ್ಮೇಳನ ಆಚರಣಾ ಸಮಿತಿಯ ವೆಂಕಟರಮಣಸ್ವಾಮಿ(ಪಾಪು), ಮಹೇಶ್ ಕುದರ್, ಎನ್.ನಾಗಯ್ಯ, ಅಯ್ಯನಪುರ ಶಿವಕುಮಾರ್, ಕಾಗಲವಾಡಿ ಚಂದ್ರು ಹಾಜರಿದ್ದರು.






