ಶೂಟೌಟ್ ಪ್ರಕರಣ | ಪ್ರತಿಭಟನೆಗೆ ಸೀಮಿತವಾಗಿತ್ತು ಹನೂರು ಬಂದ್!

ಚಾಮರಾಜನಗರ /ಹನೂರು : ಜಿಲ್ಲೆಯ ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಶೂಟೌಟ್ ಪ್ರಕರಣವನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಹನೂರು ಬಂದ್ ಕೇವಲ ಪ್ರತಿಭಟನೆಗೆ ಸೀಮಿತವಾಯಿತು. ಬಂದ್‌ಗೆ ವರ್ತಕರ ಸಂಘ ಬೆಂಬಲ ನೀಡದ ಕಾರಣ ಪಟ್ಟಣದಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದವು.
ಅಲ್ಲದೇ ವಾಹನ ಸಂಚಾರ ಕೂಡ ಎಂದಿನಂತೆ ಇತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅರಣ್ಯ ಇಲಾಖೆಯ ಕಚೇರಿ ಮುಂದೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿತ್ತು. ಪಟ್ಟಣದ ಮುಖ್ಯ ರಸ್ತೆಯಲ್ಲಿ ರೈತ ಸಂಘದ ಕಾರ್ಯಕರ್ತರು, ಮೃತರ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಎನ್‌ಕೌಂಟರ್ ನಡೆಸಿದ ಅರಣ್ಯ ಸಿಬ್ಬಂದಿಯನ್ನು ಕೂಡಲೇ ಅಮಾನತು ಮಾಡಿ ಬಂಧಿಸಬೇಕು. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಬೇಕು. ಮೃತರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನುಕೂಗಿದರು.




