ಚಿಕ್ಕಬಳ್ಳಾಪುರದಲ್ಲಿ ಪತ್ರಕರ್ತರ ಮಕ್ಕಳ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

ಚಿಕ್ಕಬಳ್ಳಾಪುರ : ಶಿಕ್ಷಣ ಸಮಾಜದ ಬದಲಾವಣೆಗೆ ದೊಡ್ಡ ಅಸ್ತ್ರವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಅತ್ಯಂತ ಮುಖ್ಯ. ಇಂತಹ ಗೌರವಗಳು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುವುದರ ಜೊತೆಗೆ ಸಾಧನೆಯತ್ತ ಮುನ್ನಡೆಯಲು ಸ್ಫೂರ್ತಿ ನೀಡುತ್ತವೆ ಎಂದು ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಸಕ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ.
ನಗರದ ಕನ್ನಡ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಚಿಕ್ಕಬಳ್ಳಾಪುರ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಭಾವಂತರನ್ನು ಗುರುತಿಸಿ ಸನ್ಮಾನಿಸುವ ಪತ್ರಕರ್ತರ ಸಂಘದ ಕಾರ್ಯ ಶ್ಲಾಘನೀಯ ಎಂದರು.
ಸಂವಿಧಾನದ ಚೌಕಟ್ಟಿನೊಳಗೆ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಪತ್ರಿಕೋದ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆಡಳಿತ ಪಕ್ಷದ ಕಾರ್ಯವೈಖರಿಯನ್ನು ಜನರ ಮುಂದಿಡುವುದರ ಜೊತೆಗೆ ವಿರೋಧ ಪಕ್ಷಕ್ಕೂ ದಾರಿ ತೋರಿಸಿ ಅಗತ್ಯ ಮಾಹಿತಿಯನ್ನು ಒದಗಿಸುವ ಜವಾಬ್ದಾರಿಯನ್ನು ಪತ್ರಿಕೋದ್ಯಮ ನಿರ್ವಹಿಸುತ್ತಿದೆ ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರ ಸಂಘವು ಪತ್ರಕರ್ತರ ಶ್ರೇಯೋಭಿವೃದ್ಧಿಗಾಗಿ ಕ್ರೀಡಾಕೂಟಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ನಿರ್ಗಮಿತ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ, ಮತ್ತೀಕೆರೆ ಜಯರಾಮ, ಕಾರ್ಯದರ್ಶಿ ಪುಂಡಲೀಕ ಬಾಳೋಚಿ, ಸೋಮಶೇಖರ ಕರಗೋಡು, ನಿಂಗಪ್ಪ ಚಾವಡಿ, ಖಜಾಂಚಿ ವಾಸುದೇವಹೊಳ್ಳ, ಚಿಕ್ಕಬಳ್ಳಾಪುರ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಖಜಾಂಚಿ ಮುದ್ದುಕೃಷ್ಣ, ರಾಜ್ಯ ಸಮಿತಿ ಸದಸ್ಯ ಚಂದ್ರಶೇಖರ್, ಜಿಲ್ಲಾ ಕಾರ್ಯದರ್ಶಿ ಆನಂದ್, ಮಲ್ಲಿಕಾರ್ಜುನ, ಮಂಜುನಾಥ್, ಉಪಾಧ್ಯಕ್ಷಾದ ಮುಬಶ್ಶಿರ್ ಅಹ್ಮದ್, ರಾಧಾಕೃಷ್ಣ, ಆನಂದ್, ಮಾಜಿ ಜಿಲ್ಲಾಧ್ಯಕ್ಷ ಎಂ.ಜಯರಾಮ್, ಕಾರ್ಯಕಾರಿಣಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.






