Chikkaballapur | ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮಾ; ಪ್ರದೀಪ್ ಈಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಆಕ್ರೋಶ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕೆಲ ಜೆಡಿಎಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಕಾರ್ಯಕ್ರಮದ ಬಳಿಕ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನತ್ತ ಚಪ್ಪಲಿ ಎಸೆದ ಘಟನೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಉಂಟಾಯಿತು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಜಿಲ್ಲಾಡಳಿತದ ವತಿಯಿಂದ ನಗರದ ಬಿಬಿ ರಸ್ತೆಯ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಕೆಲ ಜೆಡಿಎಸ್ ಬೆಂಬಲಿಗರು ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ವೇದಿಕೆಯಿಂದ ಕೆಳಗಿಳಿಸುವಂತೆ ಒತ್ತಾಯಿಸಿ ಕಾರ್ಯಕರ್ತರ ನಡುವೆ ನೂಕುನುಗ್ಗಲು ನಡೆಯಿತು.
ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಈ ವೇಳೆ ಲಘು ಲಾಠಿ ಪ್ರಹಾರ ನಡೆಸಲಾಗಿದೆ ಎನ್ನಲಾಗಿದ್ದು, ಕೆಲವರನ್ನು ವಶಕ್ಕೆ ಪಡೆದು ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು.
ಕಾರ್ಯಕ್ರಮ ಮುಗಿದ ಬಳಿಕ ಶಾಸಕ ಪ್ರದೀಪ್ ಈಶ್ವರ್ ಅವರು ವಾಹನದಲ್ಲಿ ತೆರಳುತ್ತಿದ್ದ ವೇಳೆ ಕೆಲವರು ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ವಾಹನದ ಮೇಲ್ಭಾಗದಿಂದ ಜನರನ್ನು ಉದ್ದೇಶಿಸಿ ಪ್ರತಿಕ್ರಿಯೆ ನೀಡಿದ ಶಾಸಕ ಪ್ರದೀಪ್ ಈಶ್ವರ್ ಅವರು, ಸವಾಲಿನ ಧಾಟಿಯಲ್ಲಿ ಮಾತನಾಡಿದರು ಎನ್ನಲಾಗಿದೆ.
ಇದೇ ಸಂದರ್ಭದಲ್ಲಿ ಕಾರಿನತ್ತ ಚಪ್ಪಲಿ ಎಸೆದ ಘಟನೆ ನಡೆದಿದೆ. ಚಪ್ಪಲಿ ಎಸೆದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾದಾಗ ಕೆಲ ಆಕ್ರೋಶಿತರು ವಿರೋಧ ವ್ಯಕ್ತಪಡಿಸಿದ್ದು, ಮತ್ತೆ ತಳ್ಳಾಟ-ನೂಕಾಟ ನಡೆಯಿತು ಎಂದು ತಿಳಿದುಬಂದಿದೆ.
ಬಳಿಕ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ನಡೆಯುತ್ತಿರುವ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಖಂಡಿಸಿದರು.






