Chikkaballapur | ಸರಣಿ ರಸ್ತೆ ಅಪಘಾತ : ದಂಪತಿ ಸಹಿತ ಮೂವರ ಮೃತ್ಯು

ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕರೆಡ್ಡಿಹಳ್ಳಿ ಗ್ರಾಮದ ಬಳಿ ಗೂಡ್ಸ್ ಬೊಲೆರೋ, ಎರಡು ಆಟೊ, ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವುದು ಸೋಮವಾರ ರಾತ್ರಿ ವರದಿಯಾಗಿದೆ.
ಗೂಡ್ಸ್ ಬೊಲೆರೋ ವಾಹನದ ಟೈರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ವಾಹನಗಳಿಗೆ ರಭಸವಾಗಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಅಪಘಾತದಲ್ಲಿ ಚಿಂತಾಮಣಿ ತಾಲೂಕಿನ ಬ್ರಾಹ್ಮಣರಹಳ್ಳಿ ಗ್ರಾಮದ ನಿವಾಸಿಗಳಾದ ಶ್ರೀನಿವಾಸ್ ಮತ್ತು ನರಸಮ್ಮ ದಂಪತಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಇನ್ನು ಆಟೊದಲ್ಲಿ ಪ್ರಯಾಣಿಸುತ್ತಿದ್ದ ಚಿಂತಾಮಣಿ ನಗರದ ಜೆ.ಜೆ. ಕಾಲನಿ ನಿವಾಸಿ ಆಂಜಿನಮ್ಮ ಕೂಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಜೆ.ಜೆ. ಕಾಲನಿ ನಿವಾಸಿಗಳಾದ ವೆಂಕಟೇಶ್, ಪ್ರೀತಿ, ಪ್ರಿಯಾಂಕಾ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಚಿಂತಾಮಣಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಡಿವೈಎಸ್ಪಿ ರಘುನಾಥ್, ಚಿಂತಾ ಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆೆಕ್ಟರ್ ಶಿವಕುಮಾರ್ ಸಹಿತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






