ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಕಾರ್ಮಿಕ ದಂಪತಿಗೆ ಹಲ್ಲೆ ಪ್ರಕರಣ; ಆರೋಪಿಗಳ ಬಂಧನಕ್ಕೆ ಪೊಲೀಸರ ನಿರ್ಲಕ್ಷ್ಯ: ದಸಂಸ ಆರೋಪ

ಚಿಕ್ಕಮಗಳೂರು : ನಗರದ ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರ ಸಂಬಂಧಿಯಿಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ ಘಟನೆ ಹಾಗೂ ಮಲ್ಲಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೂ ಮಾಲಕನೊಬ್ಬ ಬಡ ಕಾರ್ಮಿಕ ದಂಪತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾದ ಪ್ರಕರಣಗಳಲ್ಲಿ ದೂರು ದಾಖಲಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಶ್ರೀನಿವಾಸ್ ದಂಟರಮಕ್ಕಿ ಆರೋಪಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡೂ ಪ್ರಕರಣಗಳ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಚಿಕ್ಕಮಗಳೂರು ರಾಜಕೀಯ ಪಕ್ಷವೊಂದರ ಮುಖಂಡರೊಬ್ಬರ ಸಂಬಂಧಿ ಹಾಗೂ ಮೇಲ್ವರ್ಗಕ್ಕೆ ಸೇರಿದ ಕಾರ್ತಿಕ್ ಎಂಬಾತ ಪರಿಶಿಷ್ಟ ಜಾತಿ ಜನಾಂಗಕ್ಕೆ ಸೇರಿದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದೌರ್ಜನ್ಯಕ್ಕೊಳಗಾದ ಬಾಲಕಿಗೆ ಹಾಸನ ನಗರದ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಲಾಗಿದೆ. ಈ ಘಟನೆ ಸಂಬಂಧ ಪೋಷಕರು ಬಾಲಕಿಯನ್ನು ವಿಚಾರಿಸಿದಾಗ ಬಾಲಕಿ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಪೋಷಕರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಕಾರ್ತಿಕ್ ಹಾಗೂ ಸಹಕಾರ ನೀಡಿದ್ದ ಆರೋಪದಲ್ಲಿ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಪೊಕ್ಸೊ ಸೆಕ್ಷನ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಒತ್ತಡಕ್ಕೆ ಮಣಿದಿರುವ ಪೊಲೀಸರು ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೂ ಮಾಲಕನೊಬ್ಬ ಬಡ ಕಾರ್ಮಿಕ ಮಹಿಳೆ ಹಾಗೂ ಆಕೆಯ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ಘಟನೆ ಸಂಬಂಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಆರೋಪಿ ಪ್ರಭಾವಿ ಎಂಬ ಕಾರಣಕ್ಕೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದ ಅವರು ಆರೋಪಿಸಿದರು.
ಮಲ್ಲಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬೆಟ್ಟದಮಳಲಿ ಗ್ರಾಮದ ಕಾಫಿ ಬೆಳೆಗಾರರೊಬ್ಬರ ತೋಟದಲ್ಲಿ ಅವತಿ ಹೊಸಳ್ಳಿ ಗ್ರಾಮದ ದಂಪತಿ ಮತ್ತು ಅವರ ಮಗಳು ಕೂಲಿ ಕೆಲಸ ಮಾಡಿಕೊಂಡು ಆತನ ತೋಟದ ಲೈನ್ ಮನೆಯಲ್ಲಿ ವಾಸವಾಗಿದ್ದರು. ದಂಪತಿಯ ಮಗಳ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ. ಬಾಲಕಿಯನ್ನು ಸದ್ಯ ಬಾಲ ಮಂದಿರದಲ್ಲಿ ಇರಿಸಲಾಗಿದೆ. ಕೆಲ ದಿನಗಳ ಹಿಂದೆ ಬಾಲಕಿಯ ತಂದೆ ತಾಯಿ ಬಾಲ ಮಂದಿರದಲ್ಲಿದ್ದ ಮಗಳನ್ನು ನೋಡುವ ಉದ್ದೇಶದಿಂದ ಬೆಟ್ಟದ ಮಳಲಿ ಎಸ್ಟೇಟ್‌ನ ಮಾಲಕನ ಬಳಿ ಒಂದು ದಿನ ರಜೆ ನೀಡುವಂತೆ ಕೇಳಿದ್ದಾರೆ. ಇಷ್ಟಕ್ಕೆ ಕುಪಿತನಾದ ಎಸ್ಟೇಟ್ ಮಾಲಕ ಕಾರ್ಮಿಕ ದಂಪತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೇ ಬೆತ್ತದಿಂದ ಬಾಸುಂಡೆ ಬರುವಂತೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಅಸ್ವಸ್ಥರಾದ ದಂಪತಿ ಚಿಕ್ಕಮಗಳೂರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದಾರೆ. ಈ ಘಟನೆ ಬಳಿಕ ಕಾರ್ಮಿಕ ದಂಪತಿ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಎಸ್ಟೇಟ್ ಮಾಲಕನ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ದೂರು ದಾಖಲಿಸಿಕೊಂಡಿದ್ದರೂ ಇದುವರೆಗೂ ಆರೋಪಿಯನ್ನು ಬಂಧಿಸಿಲ್ಲ ಎಂದು ದೂರಿದರು.
ಈ ಎರಡೂ ಪ್ರಕರಣಗಳಲ್ಲಿ ಪೊಲೀಸರು ಪ್ರಭಾವಿಗಳು, ರಾಜಕಾರಣಿಗಳ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಇದರಿಂದಾಗಿ ಶೋಷಿತ ಸಮುದಾಯದವರಿಗೆ ಅನ್ಯಾಯವಾಗಿದ್ದು, ತಳ ಸಮುದಾಯದವರ ಮೇಲಿನ ದೌರ್ಜನ್ಯಗಳಿಗೆ ಪೊಲೀಸ್ ಇಲಾಖೆ ನ್ಯಾಯ ನೀಡುವಲ್ಲಿ ವಿಫಲವಾಗಿದೆ. ಈ ಎರಡೂ ಪ್ರಕರಣಗಳ ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ಮುಂದಿನ ಎರಡು ದಿನಗಳಲ್ಲಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ತಪ್ಪಿದಲ್ಲಿ ಎಸ್ಪಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಇದೇ ವೇಳೆ ಅವರು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಸಂಚಾಲಕರಾದ ಕೂದುವಳ್ಳಿ ಮಂಜುನಾಥ್, ಕೃಷ್ಣಮೂರ್ತಿ, ಬಾಲಕೃಷ್ಣ, ಮಂಜುನಾಥ್, ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.







