ಬಡವರ ಶ್ರೇಯೋಭಿವೃದ್ಧಿಗೆ ಕೇಂದ್ರ ಸರಕಾರ ಒತ್ತು ನೀಡಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಚಿಕ್ಕಮಗಳೂರು: ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಬಡ ವರ್ಗದವರು, ಹಿಂದುಳಿದವರೂ ಸೇರಿದಂತೆ ಎಲ್ಲ ಸಮುದಾಯದ ಜನರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ ಎಂದು ಕೇಂದ್ರ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಉರುಬಗ್ಗೆ ಗ್ರಾಮದಲ್ಲಿ ರವಿವಾರ ಹಮ್ಮಿಕೊಂಡಿದ್ದ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿ.ಜೆ.ಪಿ ಸರಕಾರ ಕೆಂದ್ರದಲ್ಲಿ ಅಧಿಕಾರಕ್ಕೆ ಬಂದ 9 ವರ್ಷಗಳಲ್ಲಿ ದೇಶದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಪ್ರಧಾನ್ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಂತಹ ಜನಪರವಾಗಿ ಹಲವರು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಮೂಲಕ ಜನಪರವಾದ ಆಡಳಿತವನ್ನು ನೀಡುತ್ತಿದೆ ಎಂದರು.
ಕೃಷಿಯಲ್ಲಿ ತಂತ್ರಜ್ಞಾನ ಬಳಸಿಕೊಳ್ಳಲು ಕೇಂದ್ರವು ಸಹಕಾರ ನೀಡಿದ್ದು, ರೈತರು ತಮ್ಮ ಜಮೀನಿನಲ್ಲಿ ಡ್ರೋನ್ ಮೂಲಕ ಸೌಷಧ ಸಿಂಪಡಣೆ ಮಾಡುವ ತಂತ್ರಜ್ಞಾನವನ್ನೂ ಜಾರಿಗೊಳಿಸಿದೆ. ಇದರಿಂದ ಸಮಯದ ಉಳಿತಾಯದ ಜೊತೆಗೆ ಔಷಧ ಸಿಂಪಡಣೆಯಿಂದ ಮನುಷ್ಯರಿಗೆ ಆರೋಗ್ಯ ಸಮಸ್ಯೆ ಉಂಟಾಗುವುದನ್ನು ತಪ್ಪಿಸಿದಂತೆ ಮಾಡಿದ್ದಾರೆ ಎಂದ ಅವರು, ವಿಕಸಿತ್ ಭಾರತ್ ಯಾತ್ರೆ ಮೂಲಕ ಕೇಂದ್ರ ಸರಕಾರ ಮತ್ತಷ್ಟು ಯೋಜನೆಗಳನ್ನು ಜನರಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ ಸೇರಿದಂತೆ ಸ್ಥಳೀಯ, ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು.