Chikkamagaluru | ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿ ಮೃತ್ಯು; ಸಕಾಲದಲ್ಲಿ ಚಿಕಿತ್ಸೆ ನೀಡಲು ನಿರ್ಲಕ್ಷ್ಯ: ಕುಟುಂಬಸ್ಥರ ಆರೋಪ

ಸಾಂದರ್ಭಿಕ ಚಿತ್ರ | PC : freepik
ಚಿಕ್ಕಮಗಳೂರು : ಮಲ್ಲೇಗೌಡ ಸರಕಾರಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಲಕ್ಷ್ಮೀಪುರ ಗ್ರಾಮದ ಮಂಜುನಾಥ್ (60) ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚ್ಚರ್ ಮೇಲೆ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡಲಾಗಿಲ್ಲ ಎನ್ನಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಮೊಬೈಲ್ನಲ್ಲಿ ಮಾತನಾಡುತ್ತಾ ಕುಳಿತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ.
ಆಸ್ಪತ್ರೆಗೆ ಬಂದು ಸುಮಾರು ಒಂದು ಗಂಟೆ ಕಳೆದರೂ ಸೂಕ್ತ ಚಿಕಿತ್ಸೆ ಸಿಗದೆ ಮಂಜುನಾಥ್ ಪರದಾಡಿದ್ದು, ನಂತರ ತಡವಾಗಿ ಐಸಿಯುವಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರೋಗಿಗಳಿಗೆ ಚಿಕಿತ್ಸೆ ನೀಡದೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಮೃತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





