Chikkamagaluru | ಕಾಡಾನೆ ದಾಳಿಗೆ ಕೃಷಿಕ ಬಲಿ: ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಎನ್.ಆರ್.ಪುರ ಬಂದ್
ಅಂಗಡಿ-ಮುಂಗಟ್ಟು ಬಂದ್ ಮಾಡಿ ಗ್ರಾಮಸ್ಥರ ಆಕ್ರೋಶ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೃಷಿಕ ಕೃಷ್ಣಮೂರ್ತಿ ಮೃತಪಟ್ಟ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ನಿರಂತರವಾಗಿ ನಡೆಯುತ್ತಿರುವ ಕಾಡಾನೆ ಹಾವಳಿಯನ್ನು ಖಂಡಿಸಿ ಹಾಗೂ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಇಂದು ಎನ್.ಆರ್.ಪುರ ತಾಲೂಕು ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ.
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಡಾನೆಗಳ ಉಪಟಳದಿಂದ ರೈತರು ಹಾಗೂ ಸಾರ್ವಜನಿಕರು ಭಯದ ನೆರಳಿನಲ್ಲಿ ಬದುಕುವಂತಾಗಿದೆ. ಕಾಡಾನೆಗಳು ಅರಣ್ಯದಿಂದ ನಾಡಿಗೆ ಬಾರದಂತೆ ತಡೆಯಲು ಅರಣ್ಯ ಇಲಾಖೆ ಮತ್ತು ಸರ್ಕಾರ ಕೂಡಲೇ ಕಠಿಣ ಹಾಗೂ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್ ಆಚರಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ, ನಿನ್ನೆ ಕಾಡಾನೆ ದಾಳಿಯಿಂದ ಮೃತಪಟ್ಟ ಕೃಷ್ಣಮೂರ್ತಿ ಅವರ ಮೃತದೇಹವನ್ನು ಸ್ಥಳಾಂತರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಅಧಿಕಾರಿಗಳ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಗ್ರಾಮಸ್ಥರು, ಮೂಡಬಾಗಿಲು ಸಮೀಪ ಅಂಬುಲೆನ್ಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮೃತದೇಹವಿದ್ದ ಅಂಬುಲೆನ್ಸ್ ಅನ್ನು ಮೂಡಬಾಗಿಲಿನಿಂದ ಮತ್ತೆ ಹೆನ್ನಂಗಿ ಗ್ರಾಮಕ್ಕೆ ವಾಪಸ್ ಕಳುಹಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು.




