ಚಿಕ್ಕಮಗಳೂರು : ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕಾರು ಹರಿದು 7 ವರ್ಷದ ಬಾಲಕಿ ಮೃತ್ಯು; 7 ಮಂದಿಗೆ ಗಾಯ

ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ನಿಯಂತ್ರಣ ತಪ್ಪಿದ ಕಾರೊಂದು ಹರಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತ ಬಾಲಕಿಯನ್ನು 7 ವರ್ಷದ ಸಾನ್ವಿ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ನಿಶ್ಚಿತ್ (11), ತೃಪ್ತಿ (11), ತಿಮ್ಮರಾಜು (45), ಉಷಾ (22), ಸೃಷ್ಟಿ (18), ನಾಗರಾಜು (28) ಹಾಗೂ ಚೇತನ್ (16) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ರೊಚ್ಚಿಗೆದ್ದ ಸ್ಥಳೀಯರು ಕಾರು ಚಾಲಕ ಸುಧಾಕರ್ ಎಂಬಾತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದು, ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಇದೇ ವೇಳೆ ಕಾರಿನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯ ಬಳಿಕ ಗಾಯಾಳುಗಳನ್ನು ಹಾಗೂ ಚಾಲಕನನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿದ್ದು, ಅಲ್ಲಿ ಆಕ್ರೋಶಿತ ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಚಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಪೊಲೀಸರು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದ ಗ್ರಾಮಸ್ಥರು, ಗಾಯಾಳುಗಳ ಕಡೆ ಗಮನ ಹರಿಸುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಸುಮಾರು 50ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಎಎಸ್ಪಿ ಜಯಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತ ಬಾಲಕಿಯ ಪೋಷಕರನ್ನು ಹಾಗೂ ಆಕ್ರೋಶಿತ ಜನರನ್ನು ಸಮಾಧಾನಪಡಿಸಿದರು.
ಸದ್ಯ ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.






