ಹಾಲಿನ ದರ ಏರಿಕೆ ಬಗ್ಗೆ ಸಭೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು: ಸಿಎಂ ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (File Photo)
ಚಿಕ್ಕಮಗಳೂರು: ಹೊರ ರಾಜ್ಯಗಳಲ್ಲಿ ಹಾಲಿನ ದರ ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ರೈತರೂ ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಈ ಸಂಬಂಧ ಸಚಿವ ಸಂಪುಟ ಸಭೆ ಕರೆದು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಶನಿವಾರ ಬಾಳೆಹೊನ್ನೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಇರುವುದರಿಂದ ರಾಜ್ಯಾದ್ಯಂತ ರೈತರು ಸಂಕಷ್ಟದಲ್ಲಿದ್ದಾರೆ. ಹೊರ ರಾಜ್ಯಗಳಲ್ಲಿ ಹಾಲಿನ ದರ ಏರಿಕೆ ಮಾಡಿರುವುದರಿಂದ ನಮ್ಮಲ್ಲೂ ಹಾಲಿನ ದರ ಏರಿಕೆ ಮಾಡುವಂತೆ ಗಲಾಟೆ ಮಾಡುತ್ತಿದ್ದಾರೆ. ರೈತರಿಗೆ ಹುಲ್ಲು ಸಿಗುತ್ತಿಲ್ಲ, ಹಿಂಡಿ ಬೆಲೆ ಹೆಚ್ಚಾಗಿದ್ದು, ರೈತರಿಗೆ ತೊಂದರೆಯಾಗಿದೆ. ಹಾಲಿನ ಉತ್ಪಾದನೆಯೂ ಕಡಿಮೆಯಾಗಿದೆ. ರೈತರ ಈ ಸಂಕಷ್ಟ ದೂರ ಮಾಡುವ ನಿಟ್ಟಿನಲ್ಲಿ ಸದ್ಯದಲ್ಲೇ ಪರಿಹಾರ ಹುಡುಕುತ್ತೇನೆ ಎಂದರು.
ಕಸ್ತೂರಿರಂಗನ್ ವರದಿಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ. ನಾನು ಜನರ ಭಾವನೆಗಳನ್ನು ಅರಿತು ವರದಿಯಿಂದ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಅಗತ್ಯ ಯೋಜನೆಗಳನ್ನು ರೂಪಿಸುತ್ತೇನೆ. ಕರಾವಳಿ, ಮಲೆನಾಡು ಭಾಗದಲ್ಲಿ ಜನರು ಅರಣ್ಯ ಕಾಯ್ದೆಗಳಿಂದಾಗಿ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದೇನೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೂ ಭೇಟಿ ನೀಡಿ ಸಮಸ್ಯೆ ಆಲಿಸಿದ್ದೇನೆ. ರವಿವಾರ ಹಾಸನಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸುತ್ತೇನೆ. ಕಸ್ತೂರಿರಂಗನ್ ವರದಿ ಸೇರಿದಂತೆ ಅರಣ್ಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆದಿದ್ದು, ಜನರ ರಕ್ಷಣೆಗಾಗಿ ಅಗತ್ಯ ಯೋಜನೆಗಳನ್ನು ರೂಪಿಸುತ್ತೇನೆ ಎಂದರು.






