ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್ ರಾಜೀನಾಮೆ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರು ತಮ್ಮ ಉಪಸಭಾಪತಿ ಹುದ್ದೆ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಉದ್ದೇಶಿಸಿ ಬರೆದಿರುವ ರಾಜೀನಾಮೆ ಪತ್ರದಲ್ಲಿ, "ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತೇನೆ" ಎಂದು ತಿಳಿಸಿದ್ದಾರೆ.
ಆಗಸ್ಟ್ 1ರಂದು ದಿನಾಂಕಿತವಾಗಿರುವ ರಾಜೀನಾಮೆ ಪತ್ರಕ್ಕೆ ಎಂ.ಕೆ. ಪ್ರಾಣೇಶ್ ಅವರು ಸಹಿ ಹಾಕಿದ್ದು, ರಾಜೀನಾಮೆಯನ್ನು ಅಂಗೀಕರಿಸುವಂತೆ ಸಭಾಪತಿಯನ್ನು ಕೋರಿದ್ದಾರೆ.
ಶುಕ್ರವಾರ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ನಡೆದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 9 ಮತಗಳ ಅಂತರದಿಂದ ಜಯಗಳಿಸಿದ್ದ ಹಿನ್ನೆಲೆಯಲ್ಲಿ, ಈ ರಾಜೀನಾಮೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ರಾಜೀನಾಮೆ ಅಂಗೀಕಾರದ ಬಳಿಕ ಮುಂದಿನ ಸಂವಿಧಾನಾತ್ಮಕ ಪ್ರಕ್ರಿಯೆಗಳು ನಡೆಯಲಿವೆ.






