ಕಾಫಿನಾಡಿನ ಮಲೆನಾಡು ಭಾಗದಲ್ಲಿ ಚುರುಕುಗೊಂಡ ಮಳೆ

ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ರವಿವಾರ ರಾತ್ರಿ ಹಾಗೂ ಸೋಮವಾರ ಇಡೀ ದಿನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ತುಂಗಾ, ಭದ್ರಾ, ಹೇಮಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.
ಚಿಕ್ಕಮಗಳೂರು ತಾಲೂಕಿನ ಆಲ್ದೂರು, ಮಲ್ಲಂದೂರು, ವಸ್ತಾರೆ ಹೋಬಳಿಗಳೂ ಸೇರಿದಂತೆ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕಳಸ ತಾಲೂಕುಗಳ ವ್ಯಾಪ್ತಿಯಲ್ಲಿ ರವಿವಾರ ಹಾಗೂ ಸೋಮವಾರ ಉತ್ತಮ ಮಳೆಯಾಗಿದ್ದು, ಉತ್ತಮ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಳ್ಳಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ.
ಈ ಬಾರಿ ಜಿಲ್ಲೆಗೆ ಮುಂಗಾರು ಮಳೆ ತಡವಾಗಿ ಕಾಲಿಟ್ಟಿದ್ದು, ಜುಲೈ ತಿಂಗಳ ಆರಂಭದಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿದಿದೆ. ಕಳೆದ ಕೆಲ ದಿನಗಳಿಂದ ಮಳೆ ಬಿಡುವು ನೀಡಿದ್ದು, ರವಿವಾರದಿಂದ ಮಳೆ ಮತ್ತೆ ಆರ್ಭಟಿಸುತ್ತಿದೆ. ಮಳೆಯ ಆರ್ಭಟಕ್ಕೆ ಅಲ್ಲಲ್ಲಿ ಮರಗಳು, ವಿದ್ಯುತ್ ಕಂಬಗಳು ಧರಾಶಾಯಿಯಾಗಿದ್ದು, ಗ್ರಾಮೀಣ ಭಾಗದ ಹಲವಾರು ಗ್ರಾಮಗಳಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ ಆಟ ಆರಂಭವಾಗಿದೆ. ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮತ್ತೆ ಆರಂಭವಾಗಿರುವುದರಿಂದ ಭತ್ತದ ಗದ್ದೆಗಳ ಕೃಷಿಕರು ಸಂತಸಗೊಂಡಿದ್ದಾರೆ. ಭತ್ತದ ಕೃಷಿಕರು ಗದ್ದೆಗಳ ಹೂಟೆ, ಸಸಿಮಡಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ.
ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದರೇ ಜಿಲ್ಲೆಯ ಬಯಲು ಭಾಗವಾದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕುಗಳಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆಯಿಂದಾಗಿ ಕೃಷಿಕರು ಕೃಷಿ ಚಟುವಟಿಕೆಯಿಂದ ದೂರ ಇಳಿಯುವಂತಾಗಿದೆ. ಈ ಮೂರು ತಾಲೂಕುಗಳ ವ್ಯಾಪ್ತಿಯಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದ್ದು, ಬರ ಪರಿಸ್ಥಿತಿಯ ಛಾಯೆ ಎಲ್ಲೆಡೆ ಕಂಡು ಬರುತ್ತಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು, ಆಲ್ದೂರು, ವಸ್ತಾರೆ ಹೋಬಳಿಗಳ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದರೇ, ಚಿಕ್ಕಮಗಳೂರು ನಗರ ಸುತ್ತಮುತ್ತಲ ಗ್ರಾಮಗಳಲ್ಲೂ ಉತ್ತಮ ಮಳೆಯಾಗುತ್ತಿದೆ, ಆದರೆ ಲಕ್ಯಾ, ಅಂಬಳೆ ಹೋಬಳಿಗಳ ವ್ಯಾಪ್ತಿಯಲ್ಲಿ ಮಳೆಯ ಕೊರತೆ ಉಂಟಾಗಿದ್ದು, ರೈತರು ಕೃಷಿ ಚಟುವಟಿಕೆ ಮಾಡಲು ಸಾಧ್ಯವಾಗದಂತಾಗಿದೆ.
ಕಾಫಿನಾಡಿನಲ್ಲಿ ಈ ಬಾರಿ ವಾಡಿಕೆಗಿಂತ ಮಳೆ ಕಡಿಮೆಯಾಗಿದ್ದರೂ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಭಾಗದಲ್ಲಿ ಕಳೆದ ವಾರ ಸುರಿದ ದಾಖಲೆಯ ಮಳೆ ಇದೀಗ ಕಾಫಿ ಬೆಳೆಗಾರರನ್ನು ಸಂಕಷ್ಟಕ್ಕೆ ತಳ್ಳಿದೆ. ಒಂದೇ ಸಮನೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ತೋಟಗಳಲ್ಲಿ ತೇವಾಂಶ ಹೆಚ್ಚಾಗಿ ಕಾಫಿ ಗಿಡಗಳಿಗೆ ಮಾರಕವಾಗಿರುವ ಕೊಳೆರೋಗ ವ್ಯಾಪಕವಾಗಿ ಹರಡುತ್ತಿದೆ. ಹಸಿರು ಕಾಯಿಯಾಗಿರುವ ಕಾಫಿ ಕೊಳೆತು ನೆಲಕ್ಕೆ ಉದುರುತ್ತಿದ್ದು, ಬೆಳೆಗಾರರಲ್ಲಿ ಆತಂಕ ಹುಟ್ಟಿಸಿದೆ. ಒಂದೆಡೆ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದಾಗಿ ತೋಟಕ್ಕೆ ಕಾಲಿಡಲೂ ಸಾಧ್ಯವಾಗುತ್ತಿಲ್ಲ, ಇನ್ನೊಂದೆಡೆ ಔಷಧಿ ಸಿಂಪಡಣೆ ಸಂಪೂರ್ಣ ಸ್ಥಗಿತಗೊಂಡಿರುವುದರಿಂದ ರೋಗ ತಡೆಗಟ್ಟುವುದು ಅಸಾಧ್ಯವಾಗಿದೆ. ಫಸಲು ಕಣ್ಣೆದುರೇ ನಾಶವಾಗುತ್ತಿರುವುದು ಕಾಫಿಯ ಉತ್ಪಾದನೆ ಮತ್ತು ಗುಣಮಟ್ಟಕ್ಕೆ ದೊಡ್ಡ ಪೆಟ್ಟು ನೀಡಿದೆ. ಈ ತೀವ್ರ ಸಂಕಷ್ಟದ ವೇಳೆಯಲ್ಲಿ ಸರ್ಕಾರ ಹಾಗೂ ಕಾಫಿ ಮಂಡಳಿ ತಕ್ಷಣವೇ ಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದ ರೈತರಿಗೆ ಶೀಘ್ರವೇ ಪರಿಹಾರ ನೀಡಲು ಧಾವಿಸಬೇಕು ಎಂದು ಬೆಳೆಗಾರರು ಒತ್ತಾಯಿಸಿದ್ದಾರೆ.






