ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ : ತನಿಖೆಗೆ ನಿವೃತ್ತ ನ್ಯಾಯಾಧೀಶೆ ಶೋಭಾ ನೇಮಕ

ಕೊಪ್ಪ : ತಾಲೂಕಿನ ಹರಂದೂರು ಪ.ಜಾತಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯಾನಿರ್ವಾಹಕ ನಿರ್ದೇಶಕರಾದ ಪಿ.ಎಸ್.ಕಾಂತರಾಜು ಅವರು ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ಆದೇಶಿಸಿದ್ದು, ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶೆ ಶೋಭಾ ಅವರನ್ನು ತನಿಖೆಗೆ ನೇಮಿಸಲಾಗಿದೆ..
ನಿವೃತ್ತ ನ್ಯಾ.ಶೋಭಾ ಅವರು ಪ್ರಕರಣದ ತನಿಖೆ ನಡೆಸಿ, ಸರಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ.
ಜೂ.28ರಂದು ಒಂಬತ್ತನೇ ತರಗತಿ ವಿದ್ಯಾರ್ಥಿನಿ ಶಮಿತಾ ವಸತಿ ಶಾಲೆಯ ಶೌಚಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಾಲಕಿ ಸಾವಿಗೆ ಶಾಲೆಯ ಸಿಬ್ಬಂದಿ ಕಿರುಕುಳ ಕಾರಣ ಎಂದು ಪೋಷಕರು ಆರೋಪಿಸಿದ್ದರು. ಅಲ್ಲದೇ ಪ್ರಗತಿಪರ ಸಂಘಟನೆಗಳು ಕೊಪ್ಪ ಪಟ್ಟಣದಲ್ಲಿ ಬೃಹತ್ ಧರಣಿ ನಡೆಸಿ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದವು. ಈ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಈ ವಸತಿ ಶಾಲೆಯಲ್ಲಿ 2023ರಲ್ಲಿ ಅಮೂಲ್ಯ ಎಂಬ ಬಾಲಕಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಎರಡೂ ಪ್ರಕರಣಗಳ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶದಲ್ಲಿ ತಿಳಿಸಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.







