ಶೃಂಗೇರಿ | ಅಂಚೆ ಮತ ಮರು ಎಣಿಕೆ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.
ಮೇ 2ರಂದು ನಡೆದ ಮರು ಮತ ಎಣಿಕೆ ವೇಳೆ ಅಂಚೆ ಮತಪತ್ರ ತಿರುಚಲಾಗಿದೆ ಎಂದು ಆರೋಪಿಸಿ, ಜತೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಮೇ 11ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹಾಗೂ ಮರು ಎಣಿಕೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು. ಇದರಿಂದ ರಾಜೇಗೌಡ ಅವರ ಶಾಸಕತ್ವ ಊರ್ಜಿತಗೊಂಡಿತ್ತು.
ಮೇ 21ರಂದು, ಗುರುವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿತ್ತು. ಅದರಂತೆ ನ್ಯಾ. ಸಂಜಯ್ ಕುಮಾರ್ ಮತ್ತು ನ್ಯಾ. ವಿನೋದ್ ಚಂದ್ರನ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.




