Tarikere | ಕಾರ್ಮಿಕರಿಬ್ಬರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ

ಸಾಂದರ್ಭಿಕ ಚಿತ್ರ | PC : Gemini AI
ಚಿಕ್ಕಮಗಳೂರು : ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ಸೋಮವಾರ ವರದಿಯಾಗಿದೆ.
ಮೃತರನ್ನು ಅಮೃತಾಪುರದ ಆನಂದ್ (48) ಹಾಗೂ ಜುಂಜಾ ನಾಯ್ಕ (65) ಎಂದು ಗುರುತಿಸಲಾಗಿದೆ.
ಅಮೃತಾಪುರ ಗ್ರಾಮದ ಮುರುಗೇಶ್ ಎಂಬವರಿಗೆ ಸೇರಿದ ಅಡಿಕೆ ತೋಟಕ್ಕೆ ಸೋಮವಾರ ಬೆಳಗ್ಗೆ ಈ ಇಬ್ಬರು ಕಾರ್ಮಿಕರು ಅಡಿಕೆ ಸುಲಿಯುವ ಕೆಲಸಕ್ಕಾಗಿ ತೆರಳಿದ್ದರು. ಆದರೆ, ಸ್ವಲ್ಪ ಸಮಯದ ನಂತರ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರ ಮೃತದೇಹಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ.
ಕೆಲಸಕ್ಕೆ ಹೋಗಿದ್ದ ಈ ಇಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದಾರೆಯೇ?, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಅಥವಾ ಇದರ ಹಿಂದೆ ಕೊಲೆಯಂತಹ ಕೃತ್ಯ ಅಡಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ತರೀಕೆರೆ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತರೀಕೆರೆ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ಹಿಂದಿನ ನಿಖರವಾದ ಕಾರಣವನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.






