ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೊಸ ಹುರುಪು ತುಂಬಲಿರುವ ಪ್ರವಾಸೋದ್ಯಮ ಸಮ್ಮೇಳನ: ಶಾಸಕ ಮಂಜುನಾಥ ಭಂಡಾರಿ

ಮಂಗಳೂರು: ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಪ್ರವಾಸೋದ್ಯಮ ಸಮ್ಮೇಳನ ಹಾಗೂ ಪಿಲಿಕುಳದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಅಭಿವೃದ್ಧಿಪಡಿಸಲಾದ ‘ಪಿಲಿಕುಳ ರೆಸಾರ್ಟ್’ ಉದ್ಘಾಟನಾ ಕಾರ್ಯಕ್ರಮವು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸುತ್ತಿರುವುದು ಜಿಲ್ಲೆಗೆ ಮಹತ್ವದ ಮತ್ತು ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ನೀಡಿದ್ದ ಭರವಸೆಯಂತೆ, ಇದೀಗ ಸರ್ಕಾರ ಆ ದಿಕ್ಕಿನಲ್ಲಿ ಕ್ರಮ ಕೈಗೊಂಡಿರುವುದು ಸಂತಸದ ವಿಚಾರವಾಗಿದೆ ಎಂದರು.
ಜಿಲ್ಲೆಯ ಪ್ರವಾಸೋದ್ಯಮವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಪ್ರೇರಣಾದಾಯಕವಾಗಿದ್ದು, ಪ್ರವಾಸೋದ್ಯಮ ಕ್ಷೇತ್ರದಲ್ಲಿ ಈಗಾಗಲೇ ತೊಡಗಿಸಿಕೊಂಡಿರುವವರು ಹಾಗೂ ಯುವ ಉದ್ಯಮಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಂಜುನಾಥ ಭಂಡಾರಿ ಕರೆ ನೀಡಿದರು.







