ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಚಿತ್ತರಂಜನ್ ಶೆಟ್ಟಿ

ಮಂಗಳೂರು, ಜು.29: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬುಧವಾರ ದೂರು ಸಲ್ಲಿಸಿದರು.
ಯಶ್‌ಪಾಲ್ ಸುವರ್ಣ ಅವರ ಹೇಳಿಕೆ ಸಾರ್ವಜನಿಕ ಜೀವನದ ಗೌರವಕ್ಕೆ ಧಕ್ಕೆ ತರುವಂತಿದ್ದು, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಮಿಥುನ್ ಎಚ್ ಎನ್ ಅವರ ಮೂಲಕ ನೀಡಿರುವ ದೂರಿನಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಚಾಲಕ ಸುಭಾಷ್ ಚಂದ್ರ ಶೆಟ್ಟಿ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಮಂಜುಳಾ ನಾಯಕ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Next Story






