ಧರ್ಮಸ್ಥಳ| ಸೌಜನ್ಯಾ ಅತ್ಯಾಚಾರ - ಹತ್ಯೆ ಪ್ರಕರಣ: ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯಾ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾ.23ರಂದು ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.
2012ರ ಅಕ್ಟೋಬರ್ ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಬಾಲಕಿ ಸೌಜನ್ಯಾಳ ಮೃತದೇಹ ಮರುದಿನ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣದ ಕುರಿತು ಆರಂಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಂತರ ಸಿಐಡಿ ತನಿಖೆ ನಡೆದು ಬಳಿಕ ಸಿಬಿಐ ತನಿಖೆಯೂ ನಡೆದಿತ್ತು. ಈ ಸಂದರ್ಭ ಕಾರ್ಕಳದ ಸಂತೋಷ್ ರಾವ್ ಎಂಬವರನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದಡಿ ಬಂಧಿಸಲಾಗಿತ್ತು.
ಕೆಲವು ಸಮಯಗಳ ಹಿಂದೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್ ರನ್ನು ನಿರ್ದೋಷಿ ಎಂದು ತೀರ್ಪು ನೀಡಿ ಬಿಡುಗಡೆಗೊಳಿಸಿತ್ತು.
ಈ ವೇಳೆ ಸಿಬಿಐ ನ್ಯಾಯಾಲಯವು ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳ ಲೋಪ ದೋಷಗಳನ್ನು ಎತ್ತಿ ತೋರಿಸಿತ್ತು. ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ತಂಡ ವಿಫಲವಾಗಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು. ಇದೇ ಅಂಶವನ್ನು ಆಧಾರವಾಗಿಟ್ಟುಕೊಂಡು ಸೌಜನ್ಯಾಳ ತಾಯಿ ಕುಸುಮಾವತಿ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ಬಗ್ಗೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಪ್ರಮುಖ ವಿಚಾರಗಳನ್ನು ಮುಂದಿಟ್ಟು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಕುಸುಮಾವತಿಯವರ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ, ಕೆಳ ನ್ಯಾಯಾಲಯದ ತೀರ್ಪನ್ನು ಗಮನಿಸಿ ಪ್ರಕರಣದ ತನಿಖೆಯ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚಿಸಿ ನೋಟಿಸ್ ಜಾರಿಗೊಳಿಸಿದೆ.
ಕಳೆದ ಎರಡು ದಶಕಗಳಿಂದ ನ್ಯಾಯಕ್ಕಾಗಿ ನಡೆಸುತ್ತಿರುವ ನಿರಂತರ ಹೋರಾಟ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮತ್ತೆ ಕುತೂಹಲ ಮೂಡಿಸಿದೆ.






