ಹೈ ಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯ

ಮಂಗಳೂರು: ಪಕ್ಷದ ಹೈ ಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. ಹೈ ಕಮಾಂಡ್ ತೀರ್ಮಾನವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯಾಗಿ ನೀವೇ ಮುಂದುವರಿಯುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.
ಎಸ್ ಐಟಿ ವರದಿ ಈ ತಿಂಗಳು ಸಿಗಲಿದೆಯೇ ಎಂಬ ಪ್ರಶ್ನೆಗೆ, ಗೃಹ ಸಚಿವರು ಅ ಬಗ್ಗೆ ಹೇಳಿಕೆ ನೀಡಿದ್ದಾರೆ. ನನಗೆ ತಿಳಿದಿಲ್ಲ ಎಂದರು.
ಕರಾವಳಿಗೆ ಪದೇ ಪದೇ ಭೇಟಿ ನೀಡುವ ಬಗ್ಗೆ ಯಾವುದೇ ಟಾರ್ಗೆಟ್ ಇಟ್ಟುಕೊಂಡಿಲ್ಲ. ಕಾರ್ಯಕ್ರಮಕ್ಕೆ ನಮ್ಮನ್ನು ಕರೆದಿದ್ದಾರೆ ಬಂದಿದ್ದೇನೆ ಅಷ್ಟೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿ, ಯಾರೇ ದ್ವೇಷ ಭಾಷಣ ಮಾಡಿದರೂ ಕೇಸು ದಾಖಲಾಗುತ್ತೆ. ದ್ವೇಷ ಸಮಾಜದಲ್ಲಿ ಒಡಕು ಸೃಷ್ಟಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ್ ರೈ, ಶಾಸಕ ಅಶೋಕ್ ರೈ, ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ. ಪ್ರಭಾಕರ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಮಮತಾ ಗಟ್ಟಿ, ಸದಾಶಿವ ಉಳ್ಳಾಲ್ , ಲಾವಣ್ಯ ಬಲ್ಲಾಳ್, ರಕ್ಷಿತ್ ಶಿವರಾಂ ಮತ್ತಿತರರು ಉಪಸ್ಥಿತರಿದ್ದರು.







