ಮಂಗಳೂರು| ಯೂಟ್ಯೂಬರ್ ಸಮೀರ್ಗೆ ನಿರೀಕ್ಷಣಾ ಜಾಮೀನು ಮಂಜೂರು

ಸಮೀರ್ ಎಂ.ಡಿ.
ಮಂಗಳೂರು, ಆ.21: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ದ.ಕ. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯವು ಗುರುವಾರ ನಿರೀಕ್ಷಣಾ ಜಾಮೀನು ನೀಡಿದೆ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಜು.12ರಂದು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಸಮೀರ್ ಎಂ.ಡಿ. ಆ.19ರಂದು ಮಂಗಳೂರು ನ್ಯಾಯಾಲಯಕ್ಕೆ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗುರುವಾರಕ್ಕೆ ಆದೇಶ ಕಾಯ್ದಿರಿಸಿತ್ತು. ಅದರಂತೆ ವಿಚಾರಣೆ ನಡೆಸಿದ ನ್ಯಾಯಾಲಯವು ಷರತುಬದ್ಧ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ.
75,000 ರೂ. ವೈಯಕ್ತಿಕ ಬಾಂಡ್ ಮತ್ತು ಓರ್ವನ ಭದ್ರತೆ ಷರತ್ತಿನೊಂದಿಗೆ ಜಾಮೀನು ನೀಡಲಾಗಿದೆ. ಇಂತಹದ್ದೆ ಅಪರಾಧ ಕೃತ್ಯದಲ್ಲಿ ಭಾಗಿಯಾಗಬಾರದು . ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಬೆದರಿಕೆ ಒಡ್ಡಬಾರದು, ಸಾಕ್ಷ್ಯಗಳನ್ನು ನಾಶ ಮಾಡಬಾರದು ಎಂದು ಎಚ್ಚರಿಕೆ ನೀಡಿದೆ. ತನಿಖಾಧಿಕಾರಿ ತನಿಖೆಗೆ ಕರೆದಾಗ ಲಭ್ಯವಾಗಿರಬೇಕು ಮತ್ತು ತನಿಖೆಗೆ ಸಹಕರಿಸಬೇಕು. ವಿಚಾರಣೆಯ ಎಲ್ಲ ದಿನ ನಿಯಮಿತವಾಗಿ ಅವರು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯವು ಸೂಚಿಸಿದೆ.
ಮತದಾರರ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ನಂತಹ ವಿಳಾಸ ಪುರಾವೆ ದಾಖಲೆಯನ್ನು ಹಾಜರುಪಡಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.







