ಮಂಗಳೂರು ನಗರದಲ್ಲಿ ರಸ್ತೆ ಸುರಕ್ಷತಾ ಜಾಥಾ

ಮಂಗಳೂರು, ಫೆ.3: ದ.ಕ. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕಚೇರಿ ಹಾಗೂ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತ ಆಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ -2026 ಅಂಗವಾಗಿ ನಗರದಲ್ಲಿ ಮಂಗಳವಾರ ರಸ್ತೆ ಸುರಕ್ಷತಾ ಜಾಥಾ ನಡೆಯಿತು.
ಕುದ್ಮುಲ್ ರಂಗರಾವ್ ಪುರಭವನದ ಬಳಿಯಿಂದ ಸ್ಟೇಟ್ ಬ್ಯಾಂಕ್ ತನಕ ನಡೆದ ಜಾಥಾಕ್ಕೆ ದ.ಕ. ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಚಾಲನೆ ನೀಡಿದರು.
ಮಂಗಳೂರು ನಗರದ ಸಂಚಾರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ, ಮಂಗಳೂರು ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ)ಮುರುಗೇಂದ್ರ ಬಸವರಾಜ ಶಿರೋಳಕರ , ಪೊಲೀಸ್, ಸಾರಿಗೆ ಇಲಾಖಾ ಅಧಿಕಾರಿಗಳು, ಶಿಕ್ಷಕರು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಜಾಥಾದಲ್ಲಿ ಭಾಗವಹಿಸಿದ್ದರು.







