ದಾವಣಗೆರೆ | ಹೆದ್ದಾರಿಯಲ್ಲಿ ವಾಹನ ತಪಾಸಣೆ ವೇಳೆ ಲಾರಿ ಢಿಕ್ಕಿ; ಪೊಲೀಸ್ ಸಿಬ್ಬಂದಿ ಮೃತ್ಯು

ಸಾಂದರ್ಭಿಕ ಚಿತ್ರ
ದಾವಣಗೆರೆ : ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭದಲ್ಲಿ ಲಾರಿಯೊಂದು ಢಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹೆಬ್ಬಾಳು ಗ್ರಾಮದ ಟೋಲ್ಗೇಟ್ ಬಳಿ ಮಂಗಳವಾರ ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಹಿಬ್ಬರಗಿ ಇಂಡಿ ಗ್ರಾಮದ ರಾಮಪ್ಪ ಪೂಜಾರಿ (33) ಮೃತಪಟ್ಟ ಪೊಲೀಸ್ ಸಿಬ್ಬಂದಿ. ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ನಗರದ ಡಿಎಆರ್ನಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಮಪ್ಪ ಪೂಜಾರಿ ಅವರನ್ನು ಹೆಬ್ಬಾಳು ಟೋಲ್ಗೇಟ್ ಬಳಿ ಲೈನ್ ಡಿಸಿಪ್ಲಿನ್ ಡ್ಯೂಟಿಗೆ ನಿಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ ಲಾರಿ ನಿಲ್ಲಿಸಲು ಸೂಚನೆ ನೀಡಿದರು. ಲಾರಿ ಚಾಲಕ ಲಾರಿ ನಿಲ್ಲಿಸದೆ ಢಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.