ದಾವಣಗೆರೆಯಲ್ಲಿ ಮೂವರು ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ

ದಾವಣಗೆರೆ : ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಸಿಬ್ಬಂದಿಗಳು ಸರಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಮೂವರು ಸರಕಾರಿ ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಚಿತ್ರದುರ್ಗದ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣಾ ನಾಯ್ಕ್ ಅವರ ಸಿದ್ದವೀರಪ್ಪ ಬಡಾವಣೆಯಲ್ಲಿರುವ ಎರಡು ಮನೆ, ಹುಬ್ಬಳ್ಳಿ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ್ ಅವರ ಆಂಜನೇಯ ಬಡಾವಣೆಯಲ್ಲಿರುವ ಮನೆ, ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಕೆಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗುತ್ತಿದೆ. ದಾವಣಗೆರೆಯ ಶಿವಕುಮಾರ್ ಬಡಾವಣೆಯಲ್ಲಿನ ಮನೆ, ಹರಪನಹಳ್ಳಿ ಒಂದು ಮನೆ ಮೇಲೆ ದಾಳಿ ಸೇರಿದಂತೆ ಒಟ್ಟು 12 ಕಡೆ ದಾಳಿ ನಡೆದಿದೆ. ಬೆಳಗಾವಿ, ಹುಬ್ಬಳ್ಳಿ, ವಿಜಯನಗರ ದಾವಣಗೆರೆಯಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆದಿದೆ.
ಮೂವರು ಸರಕಾರಿ ಅಧಿಕಾರಿಗಳಿಗೆ ಸೇರಿದ ಒಟ್ಟು 18 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳ ಮನೆಯಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಸ್ಥಿರ-ಚರಾಸ್ತಿಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ಮಾಹಿತಿ ನೀಡಿದರು.




