Bengaluru | ಮಗುವಿನ ಕೊಲೆ ಪ್ರಕರಣ: ಕರ್ತವ್ಯ ಲೋಪ: ಮೂವರು ಪೊಲೀಸರು ಅಮಾನತು

ಬೆಂಗಳೂರು : ಇಲ್ಲಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಐದೂವರೆ ವರ್ಷದ ಮಗುವಿನ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಪ್ರಸ್ತುತ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಪೊಲೀಸ್ ಇನ್‍ಸ್ಪೆಕ್ಟರ್ ಆಗಿರುವ ಹಾಗೂ ತಿಂಗಳ ಹಿಂದೆ ಕಾಡುಗೋಡಿ ಠಾಣೆಯ ಇನ್‍ಸ್ಪೆಕ್ಟರ್ ಆಗಿದ್ದ ರಂಗಸ್ವಾಮಿ, ಪಿಎಸ್ಸೈ ನಿಂಗರಾಜು ಹಾಗೂ ಕಾನ್‍ಸ್ಟೇಬಲ್ ಹಾಲೇಶ್ ನಾಯ್ಕ್ ಎಂಬುವರು ಅಮಾನತುಗೊಂಡ ಪೊಲೀಸ್ ಅಧಿಕಾರಿಗಳಾಗಿದ್ದಾರೆ.
ಮಾರ್ಚ್ 24ರಂದು ಐದೂವರೆ ವರ್ಷದ ಮಗು ವೆನ್ನಿಲಾಳನ್ನು ತಾಯಿ ಪ್ರಿಯಾಂಕಾ ಹಾಗೂ ಈಕೆಯ ಪ್ರಿಯಕರ ಮೋಹನ್ ಹತ್ಯೆ ಮಾಡಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಇಬ್ಬರನ್ನು ಬಂಧಿಸಲಾಗಿದೆ.
ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಮಗುವನ್ನು ಉಸಿರುಗಟ್ಟಿಸಿ ಸಾಯಿಸಲಾಗಿದೆ ಎಂದು ವರದಿ ಬಂದರೂ ಕೊಲೆ ಪ್ರಕರಣ ದಾಖಲಿಸದೇ ಆರೋಪಿಗಳನ್ನು ಬಂಧಿಸದೇ ಪೊಲೀಸರು ನಿರ್ಲಕ್ಷ್ಯ ತೋರಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೂವರು ಪೊಲೀಸರನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾತನಾಡಿ, ‘ಜೂ.4ರಂದು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಮಾರ್ಚ್ 24ರಂದು ಮಗುವಿನ ಹತ್ಯೆಯಾಗಿತ್ತು. ಆರಂಭದಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಿಸಲಾಗಿತ್ತು. ನಂತರ ಹತ್ಯೆ ಪ್ರಕರಣವನ್ನಾಗಿ ಪರಿವರ್ತಿಸಲಾಗಿತ್ತು. ವರದಿ ಪ್ರಕಾರ ಈ ಪ್ರಕರಣದಲ್ಲಿ ಅಧಿಕಾರಿಗಳ ಕರ್ತವ್ಯಲೋಪ ಕಂಡುಬಂದಿದ್ದರಿಂದ, ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಹತ್ಯೆ ಪ್ರಕರಣದಲ್ಲಿ ಒಟ್ಟು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿದ್ದು ಜೂನ್ 4ಕ್ಕೆ, ಈಗ ಪ್ರಕರಣದ ತನಿಖೆಗೆ ಬೇರೆ ವಿಭಾಗದ ಅಧಿಕಾರಿಯನ್ನು ನೇಮಿಸಲಾಗಿದೆ. ಸದ್ಯದಲ್ಲೇ, ಹತ್ಯೆ ಹಿಂದಿನ ಕಾರಣ ತನಿಖೆಯಿಂದ ಗೊತ್ತಾಗಲಿದೆ ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದರು.






