Dharwad : ಕೇಂದ್ರ ಕಾರಾಗೃಹದಲ್ಲಿ ಕೈದಿ ಆತ್ಮಹತ್ಯೆ

ಧಾರವಾಡ : ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಈಶ್ವರಪ್ಪ ಪೂಜಾರ (46) ಆತ್ಮಹತ್ಯೆ ಮಾಡಿಕೊಂಡ ಕೈದಿ.
ಈಶ್ವರಪ್ಪ ವರದಕ್ಷಿಣೆ ಕಿರುಕುಳ ಹಾಗೂ ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿ ಧಾರವಾಡ ಕೇಂದ್ರ ಕಾರಾಗೃಹ ಸೇರಿದ್ದ ಎಂದು ತಿಳಿದುಬಂದಿದೆ.
ಕಾರಾಗೃಹದ ಆವರಣದಲ್ಲಿರುವ ಕೆಲಸ ಮಾಡುವ ಕಟ್ಟಡದೊಳಗೆ ಈಶ್ವರಪ್ಪನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಜೈಲು ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನಾ ಸ್ಥಳಕ್ಕೆ ಧಾರವಾಡ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಮಹಜರು ನಡೆಸಿದ್ದಾರೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.





