Dharwad | ʼಪ್ರಜಾಸೇವಾʼ ಆಂದೋಲನ ಸಭೆಗೆ ಸಚಿವ ಸಂತೋಷ್ ಲಾಡ್ ಚಾಲನೆ

ಹುಬ್ಬಳ್ಳಿ : ಸರಕಾರ ಪ್ರಜಾ ಸೇವೆ ಇಲಾಖೆಯನ್ನು ಜನರ ಸಮಸ್ಯೆಗಳನ್ನು ಪರಿಹರಿಸಲು ಸ್ಥಾಪಿಸಿದೆ. ಈ ಮೂಲಕ ಜನರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹೇಳಿದರು.
ಕಲಘಟಗಿ ಪಟ್ಟಣದ ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಜನರ ಮನೆ ಬಾಗಿಲಿಗೆ ಸರಕಾರ ತೆರಳಲಿದೆ. ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರದಲ್ಲೇ ಪರಿಹರಿಸಲು ಕ್ರಮ ವಹಿಸಲಾಗುವುದು. ನಿಗದಿತ ಸಮಯದಲ್ಲಿ ಜನರ ಅಹವಾಲುಗಳನ್ನು ಇತ್ಯರ್ಥ ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಸಹ ಪ್ರಜಾ ಸೇವಾ ಆಂದೋಲನ ಸಭೆ ನಡೆಸಲಾಗುತ್ತದೆ ಎಂದರು.
ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, ನಮ್ಮ ಸರಕಾರ ಜನರ ಪರವಾಗಿದೆ. ಜನರ ಕಣ್ಣಿರು ಒರೆಸುವ ಕೆಲಸ ಮಾಡುತ್ತದೆ. ಜನರಿಗೆ ಪ್ರಾಮಾಣಿಕ ಸೇವೆ ಸಲ್ಲಿಸಬೇಕು. ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ರೈತರು, ಕಾರ್ಮಿಕರು, ಮಹಿಳೆಯರ ಸಮಸ್ಯೆಗಳನ್ನು ಆಲಿಸಬೇಕಿದೆ. ನಿಗದಿತ ಸಮಯದಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, 136 ಸೀಟುಗಳು ನೀಡಿದ ರಾಜ್ಯದ ಎಲ್ಲಾ ಜನರಿಗೆ ಧನ್ಯವಾದಗಳು. ರಾಜ್ಯದ ಜನರ ಋಣ ತೀರಿಸಬೇಕು ಎನ್ನುವ ಉದ್ದೇಶದಿಂದ ಜನರ ಮನೆ ಬಾಗಿಲಿಗೆ ಸರಕಾರದ ಯೋಜನೆಗಳು ತಲುಪಬೇಕು. ಈ ನಿಟ್ಟಿನಲ್ಲಿ ಪ್ರಜಾ ಸೇವೆ ಇಲಾಖೆ ಆರಂಭಿಸಲಾಗಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಕಾಲ ಕಾಲಕ್ಕೆ ಪರಿಹರಿಸಲಾಗುವುದು. ಜನರ ಹತ್ತಿರ ಸರಕಾರ ತಲುಪಬೇಕು. ಆ ನಿಟ್ಟಿನಲ್ಲಿ ರಾಜ್ಯದಾದ್ಯಂತ ಪ್ರಜಾ ಸೇವಾ ಆಂದೋಲನ ಸಭೆ ನಡೆಸಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ, ಜನರ ಬಾಗಿಲಿಗೆ ಸರಕಾರ ಹೋಗಲಿದೆ. ಜನರ ಬಳಿಗೆ ಸರಕಾರ ಹೋಗಿ ಸೇವೆಗಳನ್ನು ನೀಡಲಾಗುವುದು. ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಪರಿಹರಿಸುವ ಕೆಲಸಗಳು ಆಗಬೇಕಿವೆ. ಪ್ರತಿ ದಿನ ತಾಲೂಕು ಕಚೇರಿ ಹಾಗೂ ಜಿಲ್ಲಾ ಕಚೇರಿಯಲ್ಲಿ ಜನರ ಸಮಸ್ಯೆಗಳನ್ನು ದಾಖಲಿಸಿ ಶೀಘ್ರದಲ್ಲೇ ಬಗೆಹರಿಸಬೇಕು. ಅಧಿಕಾರಿಗಳು ಪ್ರಜೆಗಳ ಸೇವೆ ಮಾಡಲು ಬದ್ಧರಾಗಬೇಕು. ಹೈನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡಬೇಕಿದೆ. ರಾಜ್ಯ ಸರಕಾರ ಮೋಡ ಬಿತ್ತನೆಗೆ ಮುಂದಾಗಿದೆ. ಎಲ್ಲರ ಮನೆ ಮನೆಗೆ ಪ್ರಜಾ ಸೇವೆ ತಲುಪಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಪಣೆ ಮಾಡಿದರು. ಜಿಲ್ಲಾಧಿಕಾರಿ ಸ್ನೇಹಲ್ ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ವಿಶೇಷ ಚೇತನರಿಗೆ ತ್ರಿಚಕ್ರ ವಾಹನ, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡಲಾಯಿತು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಾಯಿತು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ ಟಿ.ಎಚ್.ಎಂ., ಜಿಲ್ಲಾ ಪಂಚಾಯ್ತಿ ಸಿಇಓ ಭುವನೇಶ ಪಾಟೀಲ, ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಇದ್ದರು.






