Dharwad | ಕಬ್ಬಿಣದ ಪ್ಲೇಟ್ ಬಿದ್ದು ಕಟ್ಟಡ ಕಾರ್ಮಿಕ ಮೃತ್ಯು

ಧಾರವಾಡ : ಕಟ್ಟಡ ಕಾಮಗಾರಿ ವೇಳೆ ಕಬ್ಬಿಣದ ಪ್ಲೇಟ್ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ನಡೆದಿದೆ.
ಮೃತನನ್ನು ಹಸನಸಾಬ್ ಪಠಾಣ (44) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಕಟ್ಟಡ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಕಬ್ಬಿಣದ ಪ್ಲೇಟ್ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದರೂ ಫಲಕಾರಿಯಾಗದೆ ಇಂದು ಬೆಳಿಗ್ಗೆ ಹಸನಸಾಬ್ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮನೆ ಮಾಲೀಕರಿಬ್ಬರು ಹಾಗೂ ಓರ್ವ ಇಂಜಿನಿಯರ್ ವಿರುದ್ಧ ದೂರು ದಾಖಲಾಗಿದೆ. ಈ ಕುರಿತು ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story




