Dharwad | ಅನುದಾನಿತ ಶಾಲಾ ಶಿಕ್ಷಕರ ಪ್ರತಿಭಟನೆ ತಾತ್ಕಾಲಿಕ ಹಿಂದಕ್ಕೆ

ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಟೆಂಟ್ ಹಾಕಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಅನುದಾನಿತ ಶಾಲೆಗಳ ಶಿಕ್ಷಕರು, ಮೂರನೇ ದಿನವಾದ ಇಂದು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ನೂರಾರು ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಶಿಕ್ಷಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ನಿನ್ನೆ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ನವೆಂಬರ್ 26ರಂದು ಮುಖ್ಯಮಂತ್ರಿ ಸಭೆ ಕರೆದಿದ್ದು, ಶಿಕ್ಷಕರ ಬೇಡಿಕೆಗಳ ಕುರಿತು ಅಲ್ಲಿ ಚರ್ಚೆಯಾಗಲಿದೆ ಎಂದರು.
ಸರಕಾರ ಶಿಕ್ಷಕರ ಯಾವ ಬೇಡಿಕೆಗಳನ್ನು ಈಡೇರಿಸಲು ಮುಂದಾಗುತ್ತದೆ ಎಂಬುದನ್ನು ಸಭೆಯಲ್ಲಿ ನೋಡಲಿದ್ದೇವೆ. ಬೇಡಿಕೆಗಳು ಸಮಾಧಾನಕರ ರೀತಿಯಲ್ಲಿ ಈಡೇರಿದರೆ ಸಾಕು. ಎಲ್ಲ ಬೇಡಿಕೆಗಳೂ ಈಡೇರಬೇಕೆಂಬ ಹಠವಿಲ್ಲ. ಸರಕಾರ ನೀಡುವ ಭರವಸೆಯ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ನವೆಂಬರ್ 26ರ ಸಭೆಯ ಬಳಿಕ 27 ಮತ್ತು 28ರಂದು ಶಿಕ್ಷಕರ ಸಭೆ ನಡೆಸಲಾಗುವುದು. ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ನವೆಂಬರ್ 28ರಂದು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು. ಸದ್ಯ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಎಂದು ತಿಳಿಸಿದರು.
ನವೆಂಬರ್ 26ರ ಸಭೆಯೇ ಮುಂದಿನ ಹೋರಾಟದ ದಿಕ್ಕನ್ನು ನಿರ್ಧರಿಸಲಿದೆ. ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಶಾಸಕರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.






