ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಮಹಿಳೆ ಬಲಿ; ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಘಟನೆ

ಸಾಂದರ್ಭಿಕ ಚಿತ್ರ | PC : Image by brgfx on Magnific/ಮೃತಪಟ್ಟ ಮಹಿಳೆ
ಹುಬ್ಬಳ್ಳಿ : ನಗರದಲ್ಲಿಂದು ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಘಟನೆ ನಡೆದಿದೆ.
ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿಕೊಂಡ ಪರಿಣಾಮ ಗಂಭೀರ ಗಾಯಗಳಾಗಿ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಪೊಲೀಸ್ ಕಮಿಷನರ್ ಎಚ್ಚರಿಕೆ: ಘಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಮೃತ ಮಹಿಳೆಯ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ.
ನಂತರ ಮಾತನಾಡಿದ ಅವರು, ಮಾಂಜಾ ದಾರದಿಂದ ಒಂದು ಜೀವ ಹೋಗಿದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಕಾರಣರಾದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಗಾಳಿಪಟ ಹಾರಿಸಲು ಮಾಂಜಾ ದಾರ ಬಳಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ದಾರ ಮಾರಾಟ ಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಿದ್ಯಾರ್ಥಿಗಳಾಗಿದ್ದರೂ ಕಾನೂನು ಕ್ರಮದಿಂದ ವಿನಾಯಿತಿ ನೀಡುವುದಿಲ್ಲ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.






