ರಾಜ್ಯ ಸರಕಾರದ ಜಾತಿ ಸಮೀಕ್ಷೆಗೆ ಮಾನ್ಯತೆಯೇ ಇಲ್ಲ : ಪ್ರಹ್ಲಾದ್ ಜೋಶಿ

ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಜಾತಿ-ಜನಗಣತಿ ಸಮೀಕ್ಷೆಗೆ ಯಾವುದೇ ಅಧಿಕೃತ ಮಾನ್ಯತೆಯಿಲ್ಲ, ಅರ್ಥವೂ ಇಲ್ಲವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ರವಿವಾರ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರಕಾರ ಜನಗಣತಿ ಮಾಡುತ್ತದೆ. ಆ ಅಧಿಕಾರ ಇರುವುದು ಕೇಂದ್ರಕ್ಕೆ ಮಾತ್ರ. ರಾಜ್ಯ ಸರಕಾರ ನಡೆಸುತ್ತಿರುವುದು ಸಮೀಕ್ಷೆಯಷ್ಟೇ. ಇದಕ್ಕೆ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.
ಸಮಾಜ ದ್ರೋಹಿಗಳಿಗೆ, ಸಮಾಜದಲ್ಲಿ ಸೌಹಾರ್ದತೆ ಕೆಡಿಸುವವರಿಗೆ, ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್ ಸರಕಾರ ಬೆಂಬಲ ಮತ್ತು ಕುಮ್ಮಕ್ಕು ನೀಡುತ್ತಿದೆ. ಈಗ ನಡೆಸುತ್ತಿರುವ ಜಾತಿಗಣತಿ ಸಮೀಕ್ಷೆಯಲ್ಲಿ ಸಹ ಇದರ ಪರಿಣಾಮ ಕಾಣುತ್ತಿದೆ ಎಂದು ಖಂಡಿಸಿದರು.
ಯಾವ ಆಧಾರದ ಮೇಲೆ ಜಾತಿ ಸಮೀಕ್ಷೆ?: ರಾಜ್ಯ ಕಾಂಗ್ರೆಸ್ ಸರಕಾರ ಅದ್ಯಾವ ಆಧಾರದ ಮೇಲೆ ಜಾತಿ ಸಮೀಕ್ಷೆ ಮಾಡುತ್ತಿದೆ? ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಎಂದು ಯಾವ ಆಧಾರ ಮೇಲೆ ಮಾಡಲು ಹೊರಟಿದ್ದೀರಿ? ಎಂದು ರಾಜ್ಯ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಸಿಎಂ ಅಲ್ಟ್ರಾ ಲೆಫ್ಟಿಸ್ಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅಲ್ಟ್ರಾ ಲೆಫ್ಟಿಸ್ಟ್ ಆಗಿದ್ದಾರೆ. ಜಾತಿ ಜನಗಣತಿ ಎಂದು ಕಳೆದ ಬಾರಿ 400 ಕೋಟಿ ಕಳೆದಿದ್ದಾರೆ. ಈ ಬಾರಿಯೂ 400 ಕೋಟಿ ಕಳೆಯುತ್ತಿದ್ದಾರೆ ಅಷ್ಟೇ. ಅದರ ವಿನಾಃ ಬೇರೇನೂ ಆಗುವುದಿಲ್ಲ. ಇದಕ್ಕೆ ಯಾವುದೇ ಮನ್ನಣೆ-ಮಾನ್ಯತೆ ಸಿಗುವುದಿಲ್ಲ ಎಂದು ಜೋಶಿ ಹೇಳಿದರು.
ಒಕ್ಕಲಿಗರು ಸೇರಿದಂತೆ ಹಲವು ಸಮುದಾಯಗಳಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಜಾತಿ ಸಮೀಕ್ಷೆ ಮಾಡಿದರೆ ಒಕ್ಕಲಿಗ ಸಮಾಜದಲ್ಲಿ ತಮ್ಮ ನಾಯಕತ್ವ ಹೋಗಲಿದೆ ಎಂಬ ಸತ್ಯ ಡಿಕೆಶಿ ಅರಿವಿಗೆ ಬಂದಿದೆ. ಹಾಗಾಗಿ ಅವರೂ ಸೇರಿದಂತೆ ಕಾಂಗ್ರೆಸ್ನ ಸಚಿವರುಗಳೇ ಇದರ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದರು.
ಹಿಂದೂ ಸಮಾಜ ಒಡೆಯುವ ಷಡ್ಯಂತ್ರ: ನಕಲಿ ಗಾಂಧಿಗಳ ಅಣತಿಯಂತೆ ಸಿಎಂ ಸಿದ್ದರಾಮಯ್ಯ ಅವರು ಹಿಂದೂ ಸಮಾಜವನ್ನು ಒಡೆಯುವ ಷಡ್ಯಂತ್ರ ನಡೆಸಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರೇರಣೆ, ಸೂಚನೆಯಂತೆ ನುಸುಳುಕೋರರಿಗೆ ʼವೋಟಿಂಗ್ ಹಕ್ಕುʼ ಕೊಟ್ಟು ದೇಶವನ್ನು ಅಶಕ್ತಗೊಳಿಸುವ ಷಡ್ಯಂತ್ರದ ಭಾಗ ಇದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮತಾಂತರಿಗಳಿಗೆ ಮೀಸಲಾತಿ ಹುನ್ನಾರ : ಕನ್ವರ್ಟ್ ಆದವರಿಗೆ ಮೀಸಲಾತಿಯಿಲ್ಲ ಎಂಬುದು ನಮ್ಮ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಆದರೆ ಇವರು ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್ ಎಂದು ನಮೂದಿಸಿ ಮೀಸಲಾತಿ ಕೊಡುವ ಹುನ್ನಾರ ನಡೆಸಿದಂತಿದೆ ಎಂದು ಹರಿಹಾಯ್ದರು.
ಹಿಂದೂ ಸಮಾಜ ಮತ್ತು ವ್ಯವಸ್ಥೆಯಲ್ಲಿ ಮೊದಲು ʼಅಸ್ಪೃಶ್ಯತೆʼ ಎಂಬುದಿರಲಿಲ್ಲ. ಅದ್ಯಾವುದೋ ಒಂದು ಕೆಟ್ಟ ಕಾಲಘಟ್ಟದಲ್ಲಿ ಇದು ತೂರಿಕೊಂಡು ಬಂದಿತು. ʼಅಸ್ಪೃಶ್ಯತೆʼ ನೆಪದಲ್ಲಿ ನಮ್ಮದೇ ಬಂಧುಗಳನ್ನು, ರಕ್ತ ಸಂಬಂಧಿಗಳನ್ನು, ನಮ್ಮೊಂದಿಗೇ ಗಾಳಿ-ನೀರು ಕುಡಿದವರನ್ನು ದೂರವಿಡುವ ಕೆಟ್ಟ ಪರಿಸ್ಥಿತಿ ಎದುರಾಗಿತ್ತು. ಸಾಮಾಜಿಕ ಸಮಾನತೆ ಇಲ್ಲದಿರುವ ಅಂಥವರಿಗಾಗಿ ಮೀಸಲಾತಿ ಕಲ್ಪಿಸಲಾಯಿತು. ಆದರೆ ಈ ರಾಜ್ಯ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅದಿಂದು ಬೇರೆಯದ್ದೇ ದಿಕ್ಕು ಪಡೆದುಕೊಳ್ಳುತ್ತಿದೆ. ಮತಾಂತರಗೊಂಡವರಿಗೂ ಮೀಸಲಾತಿ ಕೊಡುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಧರ್ಮಸ್ಥಳಕ್ಕೆ ʼಬುಲ್ಡೋಜರ್ʼ ಎಂದವರ ಮೇಲೆ ಏಕಿಲ್ಲ ಕ್ರಮ?: ಧರ್ಮಸ್ಥಳ ಬಗ್ಗೆ ಏನೇನೋ ಹೇಳುತ್ತಾರೆ. ಅಂಥ ಅದೆಷ್ಟು ಜನರನ್ನು ಬಂಧಿಸಿದಿರಿ? ಧರ್ಮಸ್ಥಳಕ್ಕೆ ಬುಲ್ಡೋಜರ್ ಹಚ್ಚಬೇಕು ಎಂದವರನ್ನು ಬಿಟ್ಟು ʼಮಸೀದಿಗೆ ಬುಲ್ಡೋಜರ್ ಹಚ್ಚಬೇಕುʼ ಎಂದವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಿ. ಒಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ಮತಾಂಧರ ಪರವಿರುವಂಥ ಕೆಟ್ಟ ಸರಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.







