ನಾಳೆ (ಜ.24) ಹುಬ್ಬಳ್ಳಿಯಲ್ಲಿ ಏಕಕಾಲಕ್ಕೆ 42,345 ಮನೆಗಳ ಹಂಚಿಕೆ ಕಾರ್ಯಕ್ರಮ: ವಸತಿ ಸಚಿವ ಝಮೀರ್ ಅಹ್ಮದ್

ಹುಬ್ಬಳ್ಳಿ: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 42,345 ಮನೆಗಳ ಹಂಚಿಕೆ ಮಾಡಲು ಎಲ್ಲ ಸಿದ್ಧತೆ ಪೂರ್ಣಗೊಂಡಿದ್ದು, ಶನಿವಾರ(ಜ.24) ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನ ಸೇರಲಿದ್ದಾರೆ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಕೆ.ಎಚ್.ಮುನಿಯಪ್ಪ, ಸಂತೋಷ್ ಲಾಡ್ ಸೇರಿದಂತೆ ಎಲ್ಲ ಸಚಿವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳದಿಂದ ಕಾರ್ಯಕ್ರಮಕ್ಕೆ ಜನರು ಆಗಮಿಸಲಿದ್ದಾರೆ. ಏಕಕಾಲದಲ್ಲಿ ರಾಜ್ಯಾದ್ಯಂತ 42,345 ಬಡ ಕುಟುಂಬಗಳಿಗೆ ಮನೆಗಳು ನೀಡುತ್ತಿರುವುದು ಇದೇ ಮೊದಲು. ಈ ಹಿಂದೆ 32,789 ಮನೆ ಹಂಚಿಕೆ ಮಾಡಲಾಗಿತ್ತು. ಮುಂದಿನ ಹಂತದಲ್ಲಿ 30 ಸಾವಿರ ಮನೆ ಹಂಚುವ ಗುರಿ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿರುವ ನಡೆಯಲಿರುವ ಕಾರ್ಯಕ್ರಮದಿಂದ ಇಡೀ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ. ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ(ನ)ಯಡಿ ಕೊಳಗೇರಿ ಅಭಿವೃದ್ದಿ ಮಂಡಳಿ ವತಿಯಿಂದ ರಾಜ್ಯಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ 2ನೇ ಹಂತದ 42,345 ಮನೆಗಳ ಲೋಕಾರ್ಪಣೆ ಕಾರ್ಯಕ್ರಮ ಇದಾಗಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರಗಳ ವಿತರಣೆ:
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ರಾಜ್ಯದಾದ್ಯಂತ ಸ್ಥಳೀಯ ಸಂಸ್ಥೆಗಳ ಮತ್ತು ಸರಕಾರದ ಮಾಲಕತ್ವಕ್ಕೆ ಒಳಪಡುವ ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ 20,275 ಕೊಳಗೇರಿ ಕುಟುಂಬಗಳಿಗೆ ಇದೇ ಕಾರ್ಯಕ್ರಮದಲ್ಲಿ ಹಕ್ಕು ಪತ್ರಗಳನ್ನು ವಿತರಿಸಲಾಗುವುದು. ಇದರಿಂದ ಕೊಳಗೇರಿ ನಿವಾಸಿಗಳು ನೆಮ್ಮದಿಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ರಾಜ್ಯಾದ್ಯಂತ ಮಹಾನಗರ, ನಗರ, ಪಟ್ಟಣಗಳ ವ್ಯಾಪ್ತಿಯಲ್ಲಿ ಬರುವ ಕೊಳಗೇರಿ ಪ್ರದೇಶಗಳನ್ನು ಗುರುತಿಸಿ ಕೊಳಚೆ ಅಭಿವೃದ್ಧಿ ಮಂಡಳಿಯ ಕಾಯ್ದೆಯನ್ವಯ ಘೋಷಣೆ ಹೊರಡಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 3025 ಕೊಳಗೇರಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 2866 ಪ್ರದೇಶಗಳನ್ನು ಕೊಳಗೇರಿ ಪ್ರದೇಶವೆಂದು ಘೋಷಿಸಲಾಗಿದ್ದು, ಸದರಿ ಕೊಳಗೇರಿ ಪ್ರದೇಶಗಳಲ್ಲಿ ಮಂಡಳಿ ವತಿಯಿಂದ ಕೊಳಗೇರಿ ಸುಧಾರಣೆ ಯೋಜನೆಯಡಿ ಮೂಲಭೂತ ಸೌಲಭ್ಯ ಮತ್ತು ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿನ ಘೋಷಿತ ಕೊಳಗೇರಿ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರವು ಆಯವ್ಯಯದಲ್ಲಿ ಕೊಳಗೇರಿ ಸುಧಾರಣೆ ಯೋಜನೆಯಡಿ ಒದಗಿಸುವ ಅನುದಾನಕ್ಕನುಗುಣವಾಗಿ ಕ್ರಿಯಾ ಯೋಜನೆ ತಯಾರಿಸಿ ಮೂಲಭೂತ ಸೌಲಭ್ಯಗಳಾದ ರಸ್ತೆ, ಚರಂಡಿ, ಒಳಚರಂಡಿ, ಕುಡಿಯುವ ನೀರು, ಬೀದಿ ದೀಪ, ಸಮುದಾಯ ಶೌಚಾಲಯ ಮತ್ತು ಸಮುದಾಯ ಭವನ ಮುಂತಾದವುಗಳನ್ನು ಕಲ್ಪಿಸಲಾಗುತ್ತಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಮಾಜಿ ಸಂಸದ ಪ್ರೊ.ಐ.ಜಿ.ಸನದಿ, ಮಾಜಿ ಸಚಿವ ಹಿಂಡಸಗೇರಿ, ಶಾಸಕ ಕೋನರೆಡ್ಡಿ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಅಳ್ಳೂರ್ ಉಪಸ್ಥಿತರಿದ್ದರು.







