ಗದಗ | ಬಿಜೆಪಿ ಶಾಸಕನ ನಿವಾಸದಲ್ಲಿ ಕಾರು ಚಾಲಕ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಸಾಂದರ್ಭಿಕ ಚಿತ್ರ
ಗದಗ : ಇಲ್ಲಿನ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ಕಾರು ಚಾಲಕನೋರ್ವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಚರ್ಚೆಗೆ ಗ್ರಾಸವಾಗಿದೆ.
ಸುನಿಲ್ ಲಮಾಣಿ (25) ಮೃತ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುನೀಲ್ ಲಮಾಣಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಅವರು ಇತ್ತೀಚೆಗೆ ಖರೀದಿಸಿದ್ದ ನಿವಾಸದಲ್ಲೇ ಸುನಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುನಿಲ್ ಅವರು ಶಾಸಕ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳದಲ್ಲಿ ಯಾವುದೇ ಡೆತ್ನೋಟ್ ಸಹ ಸಿಕ್ಕಿಲ್ಲ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದು, ಅನುಮಾಸ್ಪದ ಸಾವು ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.