ರಾಜ್ಯದ 440 ಪದವಿ ಕಾಲೇಜುಗಳಿಗೆ ಶೀಘ್ರ ಖಾಯಂ ಪ್ರಾಚಾರ್ಯರ ನೇಮಕ : ಸಚಿವ ರಾಯರೆಡ್ಡಿ
ಅನ್ನದಾನೀಶ್ವರ ಶ್ರೀಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಗದಗ : ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯದ 440 ಸರಕಾರಿ ಪದವಿ ಕಾಲೇಜುಗಳಿಗೆ ಶೀಘ್ರದಲ್ಲೇ ಖಾಯಂ ಪ್ರಾಚಾರ್ಯರನ್ನು ನೇಮಕ ಮಾಡಲಾಗುವುದು. ಇದರೊಂದಿಗೆ 2 ಸಾವಿರ ಪ್ರಾಧ್ಯಾಪಕರು ಹಾಗೂ ವಿಶ್ವವಿದ್ಯಾಲಯಗಳಿಗೆ 1 ಸಾವಿರ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಜಿಲ್ಲೆಯ ಮುಂಡರಗಿಯ ಅನ್ನದಾನೀಶ್ವರ ಮಹಾವಿದ್ಯಾಲಯದ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ನಾಡೋಜ ಜ. ಅನ್ನದಾನೀಶ್ವರ ಶ್ರೀಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಮಠಗಳ ಸೇವೆ ಅನನ್ಯ: ಅನ್ನದಾನೀಶ್ವರ ಶ್ರೀಗೆ ಪ್ರಶಸ್ತಿ ನೀಡುವ ಮೂಲಕ ಸರಕಾರ ತನ್ನ ಘನತೆಯನ್ನು ಹೆಚ್ಚಿಸಿಕೊಂಡಿದೆ. ಶ್ರೀಗಳ ಸೇವಾ ಪರಂಪರೆ, ಸಮಾಜಮುಖಿ ಚಿಂತನೆ ಮತ್ತು ಸಾಂಸ್ಕೃತಿಕ ಕೊಡುಗೆಗೆ ಸಂದ ಗೌರವ ಇದಾಗಿದೆ ಎಂದು ರಾಯರೆಡ್ಡಿ ಹೇಳಿದರು.
ವೀರಶೈವ-ಲಿಂಗಾಯತ ಮಠಗಳು ಕೇವಲ ಧಾರ್ಮಿಕ ಬೋಧನೆಗೆ ಸೀಮಿತವಾಗದೆ, ಕಾಯಕ, ದಾಸೋಹ ಹಾಗೂ ಶಿಕ್ಷಣದ ಮೂಲಕ ಬಡ ಮತ್ತು ಮಧ್ಯಮ ವರ್ಗದವರಿಗೆ ಆಸರೆಯಾಗಿವೆ ಎಂದು ಬಣ್ಣಿಸಿದರು. ಅಲ್ಲದೆ, ಅನ್ನದಾನೀಶ್ವರ ಶ್ರೀಗಳ ಕಾಲೇಜು ಕಟ್ಟಡಕ್ಕೆ 2 ಕೋಟಿ ರೂ. ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಕುಕನೂರಿನ ಎಪಿಎಂಸಿಗೆ ಶ್ರೀಗಳು 19 ಎಕರೆ ಜಮೀನು ನೀಡಿರುವುದನ್ನು ಸ್ಮರಿಸಿದ ಸಚಿವರು, ಎರಡು ತಿಂಗಳ ಹಿಂದೆಯೇ ಅದಕ್ಕೆ 'ನಾಡೋಜ ಜ. ಅನ್ನದಾನೀಶ್ವರ ಮಾರುಕಟ್ಟೆ' ಎಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ. ಮುಂಡರಗಿ ತಾಲೂಕು ಆಸ್ಪತ್ರೆಗೂ ಶ್ರೀಗಳ ಹೆಸರಿಡುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ನೀರಾವರಿ, ಕಾಲೇಜು ಮಂಜೂರಾತಿಗೆ ಮನವಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ತುಂಗಭದ್ರಾ ನದಿ ಹರಿದರೂ ಶಿರಹಟ್ಟಿ ಕ್ಷೇತ್ರ ನೀರಾವರಿಯಿಂದ ವಂಚಿತವಾಗಿದೆ. ಕ್ಷೇತ್ರವನ್ನು ಸಂಪೂರ್ಣ ನೀರಾವರಿಗೆ ಒಳಪಡಿಸಬೇಕು ಹಾಗೂ ಬೆಳ್ಳಟ್ಟಿಯಲ್ಲಿ ಪದವಿ ಕಾಲೇಜು ಮತ್ತು ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಇಂಜಿನಿಯರಿಂಗ್, ಡಿಪ್ಲೊಮಾ ಕಾಲೇಜು ಮಂಜೂರು ಮಾಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, ಹಿಂದುಳಿದ ತಾಲೂಕಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆದು ಶೈಕ್ಷಣಿಕ ಕ್ರಾಂತಿ ಮಾಡಿರುವ ಶ್ರೀಗಳು, ಮುಂಡರಗಿಯ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಆಸ್ಪತ್ರೆಗೆ ಜಾಗ ದಾನ ಮಾಡಿದ್ದಾರೆ. ಹೀಗಾಗಿ ಆ ಸಂಸ್ಥೆಗಳಿಗೆ ಶ್ರೀಗಳ ಹೆಸರನ್ನೇ ನಾಮಕರಣ ಮಾಡಬೇಕೆಂದು ಆಗ್ರಹಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಶ್ರೀ ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್. ಎನ್., ಅಪರ ಜಿಲ್ಲಾಧಿಕಾರಿ ದುರುಗೇಶ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಅನ್ನದಾನೀಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಬಿ.ಜಿ. ಜವಳಿ, ರುದ್ರಗೌಡ ಪಾಟೀಲ, ಡಿ.ಡಿ. ಮೋರನಾಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸ್ವಾಗತಿಸಿದರು. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು.






