ಭ್ರಷ್ಟಾಚಾರ, ಅಕ್ರಮಗಳ ಆರೋಪ : ಬಿಜೆಪಿ ಶಾಸಕ ಸಿಮೆಂಟ್ ಮಂಜು ವಿರುದ್ಧ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ವಾಗ್ದಾಳಿ

ಸಕಲೇಶಪುರ : ಕ್ಷೇತ್ರದಲ್ಲಿ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಅಕ್ರಮಗಳು ಮಿತಿಮೀರಿವೆ ಎಂದು ಆರೋಪಿಸಿ ಬಿಜೆಪಿ ಶಾಸಕ ಸಿಮೆಂಟ್ ಮಂಜು ವಿರುದ್ಧ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸಕಲೇಶಪುರ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದ ಪ್ರಸ್ತುತ ರಾಜಕೀಯ ಹಾಗೂ ಆಡಳಿತಾತ್ಮಕ ಪರಿಸ್ಥಿತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಶಾಸಕರು, ಕಾಮಗಾರಿಗಳಲ್ಲಿ ಕಮಿಷನ್ ಪಡೆಯುವ ಮನೋಭಾವ ಹೊಂದಿರುವುದು ವಿಷಾದನೀಯ ಎಂದು ಆರೋಪಿಸಿದರು.
ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ವಿಚಾರ ಪ್ರಸ್ತಾಪಿಸಿದ ಅವರು, ಈ ಪ್ರಕ್ರಿಯೆಯಲ್ಲಿ 5 ಕೋಟಿಯಿಂದ 10 ಕೋಟಿ ರೂ. ವರೆಗೆ ಹಣದ ವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಕೋಟಿ ಕೋಟಿ ಹಣ ಪಡೆದಿದ್ದಾರೆ ಎನ್ನಲಾಗುತ್ತಿರುವವರು, ದಲಿತ ಗುತ್ತಿಗೆದಾರರ ಕಾಮಗಾರಿಗಳಲ್ಲಿಯೂ ಚಿಲ್ಲರೆ ಕಮಿಷನ್ ಪಡೆಯಲು ಮುಂದಾಗಿರುವುದು ಖಂಡನೀಯ ಎಂದು ತಿಳಿಸಿದರು.
ಸಾರ್ವಜನಿಕ ಕಾಮಗಾರಿಗಳಲ್ಲಿ ಶೇ.10ರಷ್ಟು ಕಮಿಷನ್ ಪಡೆಯಲಾಗುತ್ತಿದ್ದು, ಇದರಿಂದ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯ 18 ಪ್ರಮುಖ ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡಿವೆ ಎಂದು ಆರೋಪಿಸಿದರು.
ಶಾಸಕ ಸಿಮೆಂಟ್ ಮಂಜು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಆಪ್ತರು ಹಾಗೂ ಸಹೋದರರ ಮೂಲಕ ಅಕ್ರಮಗಳನ್ನು ನಡೆಸುತ್ತಿದ್ದಾರೆ ಎಂದು ದೂರಿದರು.
ಹೇಮಾವತಿ ನದಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅಕ್ರಮ ಮರಳುಗಾರಿಕೆ ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ ಎಂದು ವಿಶ್ವನಾಥ್ ಆರೋಪಿಸಿದರು. ಜೊತೆಗೆ ಕ್ಷೇತ್ರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದರು.
ಕಾಡೆಮ್ಮೆಗಳನ್ನು ಬೇಟೆಯಾಡಿ ಅವುಗಳ ಮಾಂಸವನ್ನು ಕೆ.ಜಿ.ಗೆ 2,000 ರೂ. ಗೆ ಮಾರಾಟ ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ಅವರು ಆಕ್ರೋಶ ವ್ಯಕ್ತಪಡಿಸಿದರು.
ದಲಿತರ ಶೋಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶ್ವನಾಥ್, ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸರಿಯಲ್ಲ ಎಂದು ಹೇಳಿದರು.
ಶಾಸಕರು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರಬೇಕು. ಅಧಿಕಾರಿಗಳು ಶಾಸಕರಿಗೆ ಹೆದರುವ ಅಗತ್ಯವಿಲ್ಲ ಎಂದು ಅವರು ಅಭಯ ನೀಡಿದರು.
ಕ್ಷೇತ್ರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ಇನ್ನು ಮುಂದೆ ಮೌನವಾಗಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ ಅವರು, ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿಗಳ ಕಚೇರಿ ಎದುರು ಧರಣಿ ನಡೆಸುವುದರ ಜೊತೆಗೆ ಲೋಕಾಯುಕ್ತಕ್ಕೆ ಅಧಿಕೃತ ದೂರು ಸಲ್ಲಿಸುವುದಾಗಿ ಘೋಷಿಸಿದರು.






