ಅರಸೀಕೆರೆ | ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಮೃತ್ಯು, ಹಲವರಿಗೆ ಗಾಯ

ಮೃತಪಟ್ಟ ಯುವಕರು
ಅರಸೀಕೆರೆ: ನಿಶ್ಚಿತಾರ್ಥ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾವಗಲ್ ಬಳಿ ಮಧ್ಯಾಹ್ನ ನಡೆದಿದೆ.
ಅರಸೀಕೆರೆ ತಾಲೂಕಿನ ಜಾವಗಲ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರೊಂದು ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೋಸಿನ್ (24) ಹಾಗೂ ಮುಹಮ್ಮದ್ ಜಿಲಾನ್ (25) ಎಂಬವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರಲ್ಲಿ ಮೊಹಮದ್ ಜಿಲಾನ್ ಅವರಿಗೆ ವಿವಾಹವಾಗಿದ್ದು, ಒಂದು ವರ್ಷದ ಮಗುವಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಜಾವಗಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.






