ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ : ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯದ ನಿಲುವು ತಿಳಿಸುವ ಮುನ್ನ ರೈತರು, ಅರಣ್ಯ ಪ್ರದೇಶದ ಸುತ್ತಮುತ್ತ ವಾಸಿಸುವವರು ಹಾಗೂ ಸ್ಥಳೀಯ ಜನರ ಅಭಿಪ್ರಾಯವನ್ನು ನೇರವಾಗಿ ಪಡೆದು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಸ್ತೃತ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ರವಿವಾರ ಸಕಲೇಶಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ತಿರಸ್ಕರಿಸಿತ್ತು. ಆದರೆ ಕೇಂದ್ರ ಸರ್ಕಾರ ಮತ್ತೆ ರಾಜ್ಯದ ಅಭಿಪ್ರಾಯ ಸೆ.27ರೊಳಗೆ ತಿಳಿಸುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಲಾಗುತ್ತಿದೆ ಎಂದರು.
ಕಸ್ತೂರಿ ರಂಗನ್ ವರದಿಗೆ ರಾಜ್ಯದ ವಿರೋಧ ಮುಂದುವರಿಕೆ
ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಹಿಂದಿನಿಂದಲೂ ವಿರೋಧಿಸುತ್ತಾ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿಯೂ ರಾಜ್ಯದ ವತಿಯಿಂದ ವರದಿಯನ್ನು ತಿರಸ್ಕರಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಮತ್ತೆ ಈ ವಿಚಾರವನ್ನು ರಾಜ್ಯಕ್ಕೆ ಕಳುಹಿಸಿರುವ ಹಿನ್ನೆಲೆಯಲ್ಲಿ ಜನರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ವರದಿಯಿಂದ ಉಂಟಾಗಬಹುದಾದ ಪರಿಣಾಮಗಳು, ಜನರ ಬದುಕಿನ ಮೇಲೆ ಬೀರುವ ಪರಿಣಾಮ, ರೈತರ ಸಮಸ್ಯೆಗಳು ಹಾಗೂ ಅರಣ್ಯ ಪ್ರದೇಶದ ಸುತ್ತಮುತ್ತ ವಾಸಿಸುವ ಜನರ ಆತಂಕಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದರು.
ಕಸ್ತೂರಿ ರಂಗನ್ ವರದಿ ಸೇರಿದಂತೆ ಜನರಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ಅಧಿವೇಶನದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರಿಗೆ ವಿಸ್ತೃತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಲಾಗುವುದು ಹೇಳಿದರು.
“ಜನರ ಭಾವನೆ ಏನು, ರೈತರ ಭಾವನೆ ಏನು, ಅರಣ್ಯದ ಪಕ್ಕದಲ್ಲಿ ವಾಸಿಸುವ ಜನರ ಪರಿಸ್ಥಿತಿ ಏನು ಎಂಬುದನ್ನು ತಿಳಿದುಕೊಂಡು, ನಂತರ ಸದನದಲ್ಲಿ ಚರ್ಚೆ ಮಾಡುತ್ತೇವೆ” ಎಂದು ಅವರು ಹೇಳಿದರು.
ಕಸ್ತೂರಿ ರಂಗನ್ ವರದಿ ಕುರಿತು ಈಗಾಗಲೇ ವಿವಿಧ ಜಿಲ್ಲೆಗಳ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.
ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಿದ್ದು, ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ಭಾಗಕ್ಕೆ ಭೇಟಿ ನೀಡಲಾಗಿದೆ. ಮುಂದಿನ ಹಂತದಲ್ಲಿ ಸಂಬಂಧಿತ ಪ್ರದೇಶಗಳ ಜನರ ಸಮಸ್ಯೆಗಳನ್ನು ಆಲಿಸಿ ಸರ್ಕಾರದ ನಿರ್ಧಾರಕ್ಕೆ ಅವುಗಳನ್ನು ಪರಿಗಣಿಸಲಾಗುವುದು ಎಂದರು.
ಕುಮಾರಸ್ವಾಮಿ ಟೀಕೆಗೆ ತಿರುಗೇಟು
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮನ್ನು ‘ಟೂರಿಂಗ್ ಟಾಕೀಸ್’ ಎಂದು ಟೀಕಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ಟೀಕೆಗಳು ಸಹಜ. ಅದನ್ನು ತಾವು ಸ್ಫೂರ್ತಿಯಿಂದ ಸ್ವೀಕರಿಸುವುದಾಗಿ ಹೇಳಿದರು.
“ಟೂರಿಂಗ್ ಟಾಕೀಸ್ ನಾನು ನಡೆಸಿದ್ದೀನಿ ಅಂತ ಅವರು ಹೇಳಲಿ. ತಪ್ಪೇನಿದೆ? ಅವರಲ್ಲಿ ಅನುಭವ ಇದೆ. ಅವರು ಹೇಳುವುದರಲ್ಲಿ ಒಳ್ಳೆಯ ಸಲಹೆಗಳಿದ್ದರೆ ಅದನ್ನೂ ಸ್ವೀಕರಿಸೋಣ” ಎಂದು ಹೇಳಿದರು.






