ಹಾಸನ ಜಿಲ್ಲಾಡಳಿತದ ವಿರುದ್ಧಮಾಜಿ ಸಚಿವ ಎಚ್.ಡಿ.ರೇವಣ್ಣ ವಾಗ್ದಾಳಿ

ಎಚ್.ಡಿ.ರೇವಣ್ಣ
ಹಾಸನ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಲಂಚದ ಬೇಡಿಕೆ ಹಾಗೂ ಡಿಸಿ ಅವರ ಪಿಎಗೆ ಸಂಬಂಧಿಸಿದ ವಾಟ್ಸ್ಆ್ಯಪ್ ಚಾಟ್ಗಳನ್ನು ಬಹಿರಂಗಪಡಿಸಿದ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಮಾಜಿ ಸಚಿವ ಎಚ್.ಡಿ.ರೇವಣ್ಣ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಗರದ ಡೈರಿ ವೃತ್ತದ ಬಳಿ ಇರುವ ಹಾಸನ ಹಾಲು ಒಕ್ಕೂಟದ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವರು ಗಂಭೀರ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಅವುಗಳ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕಿತ್ತು. ಆದರೆ, ಆರೋಪಗಳಿಗೆ ಉತ್ತರ ನೀಡುವ ಬದಲು ದೂರು ದಾಖಲಿಸುವಂತೆ ಜಿಲ್ಲಾಧಿಕಾರಿ ಕಚೇರಿಯ ಪಿಎ ಶಶಿಕಿರಣ್ ಅವರಿಗೆ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದರು.
ಕುಮಾರಸ್ವಾಮಿ ಅವರು ದಾಖಲೆಗಳನ್ನು ಬಿಡುಗಡೆ ಮಾಡಿದ ಬಳಿಕ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕಾಗಿತ್ತು. ಆದರೆ, ರಾತ್ರಿ 8 ಗಂಟೆಯೊಳಗೆ ದೂರು ನೀಡದಿದ್ದರೆ ಅಮಾನತು ಮಾಡುವುದಾಗಿ ಬೆದರಿಕೆ ಹಾಕಿ ಪಿಎ ಅವರಿಂದ ನಗರ ಪೊಲೀಸ್ ಠಾಣೆಯಲ್ಲಿ ದೂರು ಕೊಡಿಸಲಾಗಿದೆ ಎಂಬ ಗಂಭೀರ ಆರೋಪವನ್ನು ರೇವಣ್ಣ ಮಾಡಿದರು.
ಪಿಎ ದೂರು ನೀಡದಿದ್ದರೆ ಅಮಾನತು ಭೀತಿ ಎದುರಿಸಬೇಕಾಗಿತ್ತು. ಹೀಗಾಗಿ ಅವರು ದೂರು ನೀಡಿದ್ದಾರೆ ಎಂದು ಹೇಳಿದರು.
ಜಿಲ್ಲಾಧಿಕಾರಿಯವರು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸಚಿವರ ಆರೋಪಗಳಿಗೆ ಸ್ಪಷ್ಟನೆ ನೀಡಿರುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಐಎಎಸ್ ಅಧಿಕಾರಿಗಳು ತಮ್ಮ ಹುದ್ದೆಯ ಘನತೆ, ನಿಷ್ಪಕ್ಷ ಮತ್ತು ಆಡಳಿತಾತ್ಮಕ ಶಿಷ್ಟಾಚಾರವನ್ನು ಕಾಪಾಡಿಕೊಳ್ಳಬೇಕು. ಮೇಲಧಿಕಾರಿಗಳ ಅನುಮತಿ ಇಲ್ಲದೆ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ವಿರುದ್ಧ ಆರೋಪ-ಪ್ರತ್ಯಾರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಈ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿಯವರು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು






