ಹಾಸನ: ಚನ್ನರಾಯಪಟ್ಟಣ ಬೈಪಾಸ್‌ನಲ್ಲಿ ಲಾರಿಗೆ ಬಸ್ ಢಿಕ್ಕಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೈಪಾಸ್ ರಸ್ತೆಯಲ್ಲಿ ಶನಿವಾರ ರಾತ್ರಿ ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಅದೇ ದಾರಿಯಲ್ಲಿ ಸಾಗುತ್ತಿದ್ದ ಲಾರಿಯ ನಡುವೆ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿ ಸುಮಾರು 40 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡ ಹದಿಮೂರು ಮಂದಿಯನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದ ಗಾಯಾಳುಗಳಿಗೆ ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.





