ಹಾಸನ | ಕಾರ್ಮಿಕ ಸಂಘಟನೆಗಳ ರಾಷ್ಟ್ರವ್ಯಾಪಿ ಮುಷ್ಕರ : ಪ್ರತಿಭಟನಾ ನಿರತರು ಪೊಲೀಸರ ವಶಕ್ಕೆ

ಹಾಸನ : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ, ಕಾರ್ಪೊರೇಟ್ ಉದ್ಯಮ ಪರ ನೀತಿಯ ವಿರುದ್ಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ರಾಷ್ಟ್ರ ವ್ಯಾಪಿ ಮುಷ್ಕರ ನಡೆಸುತ್ತಿದ್ದ ಪ್ರತಿಭಟನಾಗಾರರನ್ನು ಸಾಮೂಹಿಕವಾಗಿ ಬಂಧಿಸಿ, ನಂತರ ಬಿಡುಗಡೆಗೊಳಿಸಿದ ಘಟನೆ ಬುಧವಾರದಂದು ನಡೆಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಬಳಿ ಬಂದ ಪ್ರತಿಭಟನಾಕಾರರು ಬೃಹತ್ ಮಾನವ ಸರಪಳಿಯನ್ನು ರಚಿಸಿದರು. ಈ ವೇಳೆ ಸಂಚಾರ ದಟ್ಟಣೆ ಉಂಟಾದ ಕಾರಣಕ್ಕಾಗಿ ಪೊಲೀಸರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅನೇಕ ಮುಖಂಡರನ್ನು ಬಂಧಿಸಿ, ನಂತರ ಬಿಡುಗಡೆಗೊಳಿಸಿದರು.
ಈ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ, ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು ವೇತನ ಸಂಹಿತೆಯಲ್ಲಿ 4 ಕಾನೂನು, ಕೈಗಾರಿಕಾ ಬಾಂಧವ್ಯ ಸಂಹಿತೆಯಲ್ಲಿ 3 ಕಾನೂನು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಯಲ್ಲಿ 13 ಕಾನೂನು ಮತ್ತು ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ 9 ಕಾನೂನು ಸೇರಿದಂತೆ ಒಟ್ಟು 29 ಕಾನೂನುಗಳನ್ನು 4 ಸಂಹಿತೆಗಳಲ್ಲಿ ರೂಪಿಸಲಾಗಿದೆ ಎಂದರು.
ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ.ಸಿ.ಡೋಂಗ್ರೆ, ಮಧು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ.ಪುಷ್ಪ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಎಸ್.ಎನ್.ಲಕ್ಷ್ಮಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್, ಎಐಟಿಯುಸಿ ಮುಖಂಡರಾದ ನಾಗರತ್ನ, ಪ್ಲಾಂಟೇಷನ್ ಕಾರ್ಮಿಕರ ಸಂಘದ ಕಾರ್ಯದರ್ಶಿ ಸೌಮ್ಯ ಇತರರು ಉಪಸ್ಥಿತರಿದ್ದರು.







