Sakleshpura | ಎತ್ತಿನಹೊಳೆ ಪಂಪ್‌ಹೌಸ್‌ನಲ್ಲಿ ಭೀಕರ ಅಗ್ನಿ ಅವಘಡ: ಕಟ್ಟಡ, ಯಂತ್ರೋಪಕರಣ ಭಸ್ಮ

ಸಕಲೇಶಪುರ: ತಾಲೂಕಿನ ಮೊಗನಹಳ್ಳಿ ಗ್ರಾಮದ ಸಮೀಪವಿರುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಪಂಪ್‌ಹೌಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡ ಹಾಗೂ ಅದರಲ್ಲಿದ್ದ ಯಂತ್ರೋಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಮೂವರು ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಂಪ್‌ಹೌಸ್‌ನಲ್ಲಿ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿದೆ. ಬೆಂಕಿಯ ತೀವ್ರತೆಗೆ ಪಂಪ್‌ಹೌಸ್‌ನಲ್ಲಿದ್ದ ಬೆಲೆಬಾಳುವ ಯಂತ್ರೋಪಕರಣಗಳು ಹಾಗೂ ಕಟ್ಟಡ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಪಂಪ್‌ಹೌಸ್‌ನಲ್ಲಿದ್ದ ಮೂವರು ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ಭಾರೀ ಪ್ರಾಣಾಪಾಯ ತಪ್ಪಿದೆ.
ಸಾವಿರಾರು ಕೋಟಿ ರೂಪಾಯಿ ವೆಚ್ಚದ ಎತ್ತಿನಹೊಳೆ ಯೋಜನೆಯ ಪ್ರಮುಖ ಘಟಕವಾಗಿರುವ ಪಂಪ್‌ಹೌಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರಮುಖ ಯೋಜನೆಯ ಪಂಪ್‌ಹೌಸ್‌ನಲ್ಲಿ ಸಂಬಂಧಪಟ್ಟ ಎಂಜಿನಿಯರ್‌ಗಳು ನಿರಂತರ ಮೇಲ್ವಿಚಾರಣೆ ನಡೆಸಬೇಕಿತ್ತು. ಆದರೆ, ಅಧಿಕಾರಿಗಳ ಗೈರುಹಾಜರಿ ಹಾಗೂ ಸಮರ್ಪಕ ನಿರ್ವಹಣೆಯ ಕೊರತೆಯಿಂದಲೇ ಇಂತಹ ಘಟನೆ ಸಂಭವಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.
ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಗ್ನಿ ಅವಘಡಕ್ಕೆ ನಿಖರ ಕಾರಣವೇನು? ನಿರ್ವಹಣೆಯಲ್ಲಿ ಲೋಪವಾಗಿದೆಯೇ? ಅಧಿಕಾರಿಗಳ ನಿರ್ಲಕ್ಷ್ಯ ಇದಕ್ಕೆ ಕಾರಣವೇ? ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.






