ಶಿರಾಡಿ ಘಾಟ್‌ನಲ್ಲಿ ಭೂಕುಸಿತದ ಭೀತಿ: ಪ್ರವಾಸಿ ತಾಣಗಳಿಗೆ ನಿಷೇಧ

ಹಾಸನ : ಜಿಲ್ಲೆಯ ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನ ಹಲವೆಡೆ ಭೂಕುಸಿತದ ಆತಂಕ ಎದುರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ತಾಲೂಕಿನ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ದೊಡ್ಡತಪ್ಪಲು ಬಳಿ ಹೆಚ್ಚಿದ ಆತಂಕ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಹೆದ್ದಾರಿಯ ದೊಡ್ಡತಪ್ಪಲು ಬಳಿ ಈ ಹಿಂದೆಯೂ ಭಾರಿ ಭೂಕುಸಿತ ಸಂಭವಿಸಿತ್ತು. ಇದೀಗ ಮತ್ತೆ ಅದೇ ಪ್ರದೇಶದ 200 ಮೀಟರ್‌ಗಿಂತಲೂ ಹೆಚ್ಚಿನ ಜಾಗದಲ್ಲಿ ರಸ್ತೆಬದಿಯ ಮಣ್ಣು ಜರಿಯುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.
ಇಲ್ಲಿ ನಡೆಯಬೇಕಿದ್ದ ಗೇಬ್ರಿಯನ್ ವಾಲ್ ನಿರ್ಮಾಣ ಕಾಮಗಾರಿ ಅಪೂರ್ಣವಾಗಿರುವುದು ಈ ಆತಂಕಕ್ಕೆ ಮುಖ್ಯ ಕಾರಣವಾಗಿದೆ. ಸದ್ಯ ಹೆದ್ದಾರಿಯ ಒಂದು ಪಥದಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಪ್ರವಾಸಿ ತಾಣಗಳಿಗೆ ನಿಷೇಧ: ಭಾರೀ ಮಳೆಯಿಂದ ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಭೂಕುಸಿತದ ಸಾಧ್ಯತೆ ಇರುವುದರಿಂದ ಸಕಲೇಶಪುರ ತಾಲೂಕಿನಾದ್ಯಂತ ಜಲಪಾತಗಳು, ನದಿಗಳು, ಜಲಾಶಯಗಳು ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ 2005 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ. ಅಲ್ಲದೆ, ಹೋಂಸ್ಟೇ ಹಾಗೂ ರೆಸಾರ್ಟ್‌ಗಳು ಟ್ರಕ್ಕಿಂಗ್ ವ್ಯವಸ್ಥೆ ಕಲ್ಪಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಜಲಪಾತಗಳ ಸೌಂದರ್ಯಕ್ಕೆ ಮರುಳಾದ ಪ್ರವಾಸಿಗರು: ಮಳೆಯ ಅಬ್ಬರದಿಂದಾಗಿ ದೋಣಿಗಾಲ್‌ನಿಂದ ಅಡ್ಡಹೊಳೆಯವರೆಗಿನ ಶಿರಾಡಿ ಘಾಟ್‌ನ ಕಿರು ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಹಾಲಿನ ನೊರೆಯಂತೆ ಧುಮ್ಮಿಕ್ಕುವ ಜಲಪಾತಗಳ ದೃಶ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಮಳೆಯ ನಡುವೆಯೂ ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಈ ನೈಸರ್ಗಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.






