Haveri | ಕುಡಿಯುವ ನೀರಿಗಾಗಿ ದೇವಗಿರಿ ಗ್ರಾಮಸ್ಥರ ಹಾಹಾಕಾರ; ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯತ್ಗೆ ಮುತ್ತಿಗೆ
ಕೆರೆ ಸ್ವಚ್ಛಗೊಳಿಸಿ ನೀರು ಪೂರೈಸುವಂತೆ ಆಗ್ರಹ

ಹಾವೇರಿ : ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಜನರು, ನೀರಿಗಾಗಿ ಪರದಾಡುವಂತಾಗಿದೆ. ಸಮರ್ಪಕ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು, ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕುಡಿಯುವ ನೀರಿಲ್ಲದೆ ಜನರು ಹೇಗೆ ಬದುಕಬೇಕು ಎಂದು ಪ್ರಶ್ನಿಸಿ, ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಗ್ರಾಮದ ಕೆರೆಯನ್ನು ಸ್ವಚ್ಛಗೊಳಿಸಿ, ಕುಡಿಯಲು ಯೋಗ್ಯವಾದ ನೀರನ್ನು ಒದಗಿಸಬೇಕು. ಜನರ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ದಿನನಿತ್ಯ ಸಂಕಷ್ಟ ಅನುಭವಿಸುತ್ತಿದ್ದರೂ, ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ನೀರು ಪೂರೈಕೆ ವ್ಯವಸ್ಥೆ ಸುಧಾರಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.




