ಹಾವೇರಿ: ಪ್ರತಿ ಟನ್ ಕಬ್ಬಿಗೆ 3,600 ರೂ. ದರಕ್ಕೆ ರೈತರ ಪಟ್ಟು
ಇಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ರೈತರು, ಕಾರ್ಖಾನೆ ಮಾಲೀಕರ ಸಂಧಾನ ಸಭೆ
ಹಾವೇರಿ: ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಇಂದು ಮಹತ್ವದ ಸಂಧಾನ ಸಭೆ ಆಯೋಜಿಸಿದೆ.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ನಡೆಯಲಿದೆ. ಜಿಲ್ಲೆಯ ಮೂರು ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, 32ಕ್ಕೂ ಹೆಚ್ಚು ರೈತ ಮುಖಂಡರು ಪಾಲ್ಗೊಳ್ಳುವ ಸಾಧ್ಯತೆ ಇದೆ. ರೈತ ಮುಖಂಡ ಚೂನ್ನಪ್ಪ ಪೂಜಾರಿ ಕೂಡ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ರೈತರು ಪ್ರತಿ ಟನ್ ಕಬ್ಬಿಗೆ 3,600 ರೂ. ದರ ನಿಗದಿಪಡಿಸುವಂತೆ ಬಿಗಿಪಟ್ಟು ಹಿಡಿದಿದ್ದಾರೆ. ಈ ಬೇಡಿಕೆಗೆ ಕಾರ್ಖಾನೆ ಮಾಲೀಕರು ಯಾವ ರೀತಿಯಲ್ಲಿ ಸ್ಪಂದಿಸಲಿದ್ದಾರೆ ಎಂಬುದು ಇಂದಿನ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.
ಸಭೆಯ ನಿರ್ಧಾರದ ಮೇಲೆ ಮುಂದಿನ ಹೋರಾಟದ ಹಾದಿ:
ಇಂದಿನ ಸಂಧಾನ ಸಭೆಯ ಫಲಿತಾಂಶದ ಮೇಲೆ ರೈತರ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರವಾಗಲಿದೆ. ರೈತರ ಬೇಡಿಕೆಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಮತ್ತೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ರೈತ ಮುಖಂಡರು ನೀಡಿದ್ದಾರೆ.
ಇತ್ತ ಕಬ್ಬು ಬೆಳೆಗಾರರ ಸಭೆಗೆ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ನಿವಾಸದ ಮುಂದೆ ನಿಷೇಧಾಜ್ಞೆ ಮುಂದುವರಿಸಲಾಗಿದೆ.
ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ
ರೈತರ ಹೋರಾಟ ಹಾಗೂ ಸಭೆಯ ಹಿನ್ನೆಲೆಯಲ್ಲಿ ಹಾವೇರಿ ನಗರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 100ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 2 ಸಿಪಿಐ, 8 ಪಿಎಸ್‌ಐ, 8 ಎಎಸ್‌ಐ ಹಾಗೂ 55 ಪೊಲೀಸ್ ಸಿಬ್ಬಂದಿ ಸೇರಿದಂತೆ 10ಕ್ಕೂ ಹೆಚ್ಚು ಮಹಿಳಾ ಸಿಬ್ಬಂದಿ ಭದ್ರತಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, 2 ಡಿಆರ್ ವಾಹನಗಳನ್ನು ನಿಯೋಜಿಸಲಾಗಿದೆ. ಕಬ್ಬಿನ ಬೆಲೆ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವಿನ ಬಿಕ್ಕಟ್ಟು ಇಂದಿನ ಸಭೆಯಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂಬುದರ ಮೇಲೆ ಜಿಲ್ಲೆಯ ಕಬ್ಬು ಬೆಳೆಗಾರರ ಮುಂದಿನ ಹೋರಾಟದ ದಿಕ್ಕು ನಿರ್ಧಾರವಾಗಲಿದೆ.







