Haveri | ರಾಷ್ಟ್ರೀಯ ಹೆದ್ದಾರಿ ಪಕ್ಕದ ಹೊಲದಲ್ಲಿ ಏರ್ಫೋರ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹುಬ್ಬಳ್ಳಿ : ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ವೊಂದು ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದ ಹೊಲದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ನಡೆದಿದೆ.
ತಮಿಳುನಾಡಿನ ಸೂಲೂರು ವಾಯುನೆಲೆಯಿಂದ ಬೆಳಗಾವಿಗೆ ತೆರಳುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಪ್ರಯಾಣದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್ ಹೆಲಿಕಾಪ್ಟರ್ ಅನ್ನು ಕಾಮನಹಳ್ಳಿ ಗ್ರಾಮದ ಸಮೀಪದ ಹೊಲದಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ.
ಹೆಲಿಕಾಪ್ಟರ್ನಲ್ಲಿ ಪೈಲಟ್ ಸೇರಿದಂತೆ ಒಟ್ಟು ಆರು ಮಂದಿ ವಾಯುಪಡೆಯ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ದೀಪಕ್ ಶರ್ಮಾ ನೇತೃತ್ವದ ತಂಡದಲ್ಲಿದ್ದ ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಶಿಗ್ಗಾಂವಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story




