Haveri | ಸಿಎಂ ಆಗಮನ ಹಿನ್ನಲೆಯಲ್ಲಿ ರಸ್ತೆ ದುರಸ್ತಿ ; ಸಾರ್ವಜನಿಕರ ಆಕ್ರೋಶ

ಹಾವೇರಿ: ನಗರದ ರಸ್ತೆಗಳಲ್ಲಿ ಗುಂಡಿಗಳಿಂದ ನಿತ್ಯ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರೂ ದುರಸ್ತಿಗೆ ಮುಂದಾಗದ ಅಧಿಕಾರಿಗಳು, ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಗಮನದ ಹಿನ್ನೆಲೆಯಲ್ಲಿ ರಸ್ತೆಗಳಿಗೆ ಡಾಂಬರು ಹಾಕಲು ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಕಾಗಿನೆಲೆಯ ಶ್ರೀ ಭಕ್ತ ಕನಕದಾಸರ 539ನೇ ಜಯಂತೋತ್ಸವದ ಅಂಗವಾಗಿ ನಾಳೆ ಹಾವೇರಿ ನಗರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. ನಗರದ ಕಾಗಿನೆಲೆ ವೃತ್ತದಲ್ಲಿ 8.5 ಅಡಿ ಎತ್ತರದ ಶ್ರೀಭಕ್ತ ಕನಕದಾಸರ ಪ್ರತಿಮೆ ಉದ್ಘಾಟಿಸಲಿರುವ ಅವರು, ಬಳಿಕ ಕಾಗಿನೆಲೆ ಮಠಕ್ಕೆ ಭೇಟಿ ನೀಡಿ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ, ಸಿದ್ಧತೆ ಮತ್ತು ರಸ್ತೆ ದುರಸ್ತಿ ಕಾರ್ಯಗಳು ಭರದಿಂದ ಸಾಗಿವೆ. ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಹಾವೇರಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಆದರೆ, ನಗರದ ರಸ್ತೆಗಳಲ್ಲಿ ತಿಂಗಳುಗಳಿಂದ ಗುಂಡಿಗಳು ಬಿದ್ದಿದ್ದರೂ ಅವುಗಳನ್ನು ಸರಿಪಡಿಸಲು ಮುಂದಾಗದ ಅಧಿಕಾರಿಗಳು, ಸಿಎಂ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಹಾವೇರಿ ನಗರದ ನಗರಸಭೆ ಎದುರಿನ ರಸ್ತೆಯಲ್ಲಿ ಗುಂಡಿ ಬಿದ್ದಿದ್ದ ಸ್ಥಳಕ್ಕೆ ಇದೀಗ ಡಾಂಬರೀಕರಣ ಕಾಮಗಾರಿ ಆರಂಭಿಸಲಾಗಿದೆ. ಹಾವೇರಿ ನಗರದ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಪ್ರತಿದಿನ ಗುಂಡಿಗಳ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ದ್ವಿಚಕ್ರ ವಾಹನ ಸವಾರರು ಅಪಾಯದ ನಡುವೆ ಸಂಚರಿಸುವಂತಾಗಿದೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.
ಗಣ್ಯರು ಬಂದಾಗ ಮಾತ್ರ ರಸ್ತೆ ದುರಸ್ತಿಯೇ?
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಗಮನದ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಿರುವುದು ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾರ್ವಜನಿಕರ ನಿತ್ಯದ ಸಮಸ್ಯೆಗಳಿಗೆ ಸ್ಪಂದಿಸಲು ವಿಳಂಬ ಮಾಡುವ ಅಧಿಕಾರಿಗಳು, ಗಣ್ಯರ ಭೇಟಿ ಸಂದರ್ಭದಲ್ಲಿ ಮಾತ್ರ ಎಚ್ಚೆತ್ತುಕೊಳ್ಳುವುದು ಯಾವ ನ್ಯಾಯ? ಎಂಬ ಪ್ರಶ್ನೆ ನಾಗರಿಕರನ್ನು ಕಾಡುತ್ತಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸಬೇಕು. ಗಣ್ಯರ ಆಗಮನಕ್ಕೆ ಮಾತ್ರ ರಸ್ತೆಗಳನ್ನು ದುರಸ್ತಿ ಮಾಡುವ ಬದಲು, ನಗರದ ರಸ್ತೆಗಳನ್ನು ಸದಾ ಸುಸ್ಥಿತಿಯಲ್ಲಿ ಇಡುವ ಜವಾಬ್ದಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಿಸಬೇಕು ಎಂಬುದು ಹಾವೇರಿ ನಾಗರಿಕರ ಒತ್ತಾಯವಾಗಿದೆ.






