ಮಲ್ಲಿಕಾರ್ಜುನ ಖರ್ಗೆ ಭಾಷಣದ ಸ್ಥಳದ ‘ಶುದ್ಧೀಕರಣ' ಖಂಡನೀಯ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಉತ್ತರಾಖಂಡನ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿ ಹೋದ ಬಳಿಕ, ಆ ಜಾಗವನ್ನು ಶುದ್ಧೀಕರಣ ಮಾಡುವುದು ಅಕ್ಷಮ್ಯ ಅಪರಾಧ. ಇದನ್ನು ಎಂದಿಗೂ ಒಪ್ಪುವುದಿಲ್ಲ. ಇಂತಹ ಕೃತ್ಯಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶುಕ್ರವಾರ ಹಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೋದಿ ಕಲ್ಪನೆಯ ವಿಕಸಿತ ಭಾರತ-2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರತಿಯೊಬ್ಬ ನಾಗರಿಕನೂ ಸಮರ್ಪಣಾ ಭಾವದಿಂದ ಶ್ರಮಿಸಬೇಕು. ಈ ಸುದೀರ್ಘ ಪ್ರಗತಿಯ ಪಯಣಕ್ಕೆ ಎಲ್ಲರೂ ಸಿದ್ಧರಾಗಿ ಪ್ರತಿಜ್ಞೆ ಸ್ವೀಕರಿಸಬೇಕು ಎಂದು ಕರೆ ನೀಡಿದರು.
ಮರು ಸೇರ್ಪಡೆ ಉದ್ಧಟತನ: ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರವಾಗಿದೆ ಎಂದು ಹಿಂದಿನ ಸಿಎಂ ಸಿದ್ದರಾಮಯ್ಯರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಈ.ಡಿ ಅಧಿಕಾರಿಗಳು ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದು, ಹಣ ಎಲ್ಲಿಂದ ಬಂತು-ಎಲ್ಲಿಗೆ ಹೋಯಿತು ಎಂಬುದಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದಾರೆ. ಆದರೂ, ಬಿ.ನಾಗೇಂದ್ರರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆಯ ಬಗ್ಗೆ ಇರುವ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಇದು ಉದ್ಧಟತನದ ಪರಮಾವಧಿ ಎಂದು ಕಿಡಿಕಾರಿದರು.
ಸಿದ್ಧರಾಮಯ್ಯ ಖುಷಿಯಾಗಿಲ್ಲ: ಸಂಪುಟ ವಿಸ್ತರಣೆ ಹಾಗೂ ನಿರ್ಧಾರಗಳ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಖುಷಿಯಾಗಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ. ಅವರ ಆಪ್ತರೇ ಸಿದ್ಧರಾಮಯ್ಯರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಬಹಿರಂಗವಾಗಿ ಮಾತನಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‍ನಲ್ಲಿ ದೊಡ್ಡ ಮಟ್ಟದ ಆಂತರಿಕ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು.






