ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ವನ್ನು ನೆರವೇರಿಸಿ ಮಾತನಾಡಿದರು.
ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಘೋಷಿಸಿದ್ದೆ. ಉಪಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಘೋಷಣೆ ಮಾಡಿದ್ದೆ ಎಂದು ಸ್ಮರಿಸಿದರು.
ಕರ್ನಾಟಕದಲ್ಲಿ ಇಂದು ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರಕಾರಿ ವೈದ್ಯಕೀಯ ಕಾಲೇಜುಗಳಿವೆ. ವಿಜಯಪುರ ಜಿಲ್ಲೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಸ್ಥಳೀಯವಾಗಿ ಆರೋಗ್ಯ ಸೇವೆಗಳು ದೊರಕಬೇಕು :
ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಾಗಿದ್ದು, ಬಡವರೆಲ್ಲರೂ ಸರಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬಹಳ ದುಬಾರಿ. ದುಬಾರಿ ಚಿಕಿತ್ಸೆಯನ್ನು ಸಾಮಾನ್ಯ ಜನರು ಧರಿಸುವುದು ಕಷ್ಟ. ಸ್ಥಳೀಯವಾಗಿ ಆರೋಗ್ಯ ಸೇವೆ ನೀಡಬೇಕಾದರೆ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಇರಲೇಬೇಕು ಎಂದರು.
ಪ್ರತಿ ವರ್ಷ 52,000 ಕೋಟಿ ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ :
ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ ನಾವು ಯೋಜನೆ ನಿಲ್ಲಿಸಿಲ್ಲ. ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮೊದಲನೇ ವರ್ಷದಲ್ಲಿಯೇ ಜಾರಿ ಮಾಡಲಾಗಿದೆ. ಒಂದು ಲಕ್ಷದ 12 ಸಾವಿರ ಕೋಟಿ ರೂಪಾಯಿಗಳನ್ನು ಎರಡುವರೆ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದ್ದರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಪ್ರತಿ ವರ್ಷ 52,000 ಕೋಟಿ ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ ಎಂದರು.
ಹಾವೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡ, ನೆಲೋಗಲ್ಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಸರ್ಕೀಟ್ ಹೌಸ್ ಕಟ್ಟಡದ ಶಿಲಾನ್ಯಾಸ ನೆರವೇರಿಸಿ, ಬಳಿಕ ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉದ್ಘಾಟನೆ ನೆರವೇರಿಸುವ ಜೊತೆಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ… pic.twitter.com/g7KVyhvKvx
— Siddaramaiah (@siddaramaiah) January 7, 2026







