ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿತ; 17 ಮಕ್ಕಳು, ಶಿಕ್ಷಕಿ ಮೃತ್ಯು
40ಕ್ಕೂ ಹೆಚ್ಚು ಮಂದಿಗೆ ಗಾಯ; ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ ಕಾರ್ಯಾಚರಣೆ

PC : X@Newsforce
ಪೇಶಾವರ: ಪಾಕಿಸ್ತಾನದ ಪೇಶಾವರದಲ್ಲಿ ಖಾಸಗಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ಬಿದ್ದು 17 ಮಕ್ಕಳು ಮತ್ತು ಓರ್ವ ಶಿಕ್ಷಕಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವಶೇಷಗಳಡಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇರುವುದರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ರಾಜಧಾನಿ ಪೇಶಾವರದ ಒಳಭಾಗದಲ್ಲಿರುವ ದಿರ್ ಕಾಲೋನಿಯಲ್ಲಿ ಗುರುವಾರ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ 17 ವಿದ್ಯಾರ್ಥಿಗಳು ಮತ್ತು ಓರ್ವ ಮಹಿಳಾ ಶಿಕ್ಷಕಿ ಮೃತಪಟ್ಟಿದ್ದಾರೆ ಎಂದು ಪೇಶಾವರದ ಕ್ಯಾಪಿಟಲ್ ಸಿಟಿ ಪೊಲೀಸ್ ಮುಖ್ಯಸ್ಥ ಮಿಯಾನ್ ಸಯೀದ್ ತಿಳಿಸಿದ್ದಾರೆ.
13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು
ಮೃತಪಟ್ಟ ಎಲ್ಲ ಮಕ್ಕಳ ವಯಸ್ಸು 13 ವರ್ಷ ಅಥವಾ ಅದಕ್ಕಿಂತ ಕಡಿಮೆ ಎಂದು ಲೇಡಿ ರೀಡಿಂಗ್ ಆಸ್ಪತ್ರೆಯ ವಕ್ತಾರ ಮುಹಮ್ಮದ್ ಅಸಿಮ್ ಹೇಳಿದ್ದಾರೆ. ಗಾಯಾಳುಗಳಿಗೆ ತುರ್ತು ಚಿಕಿತ್ಸೆ ಒದಗಿಸಲು ಆಸ್ಪತ್ರೆಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಗಾಯಗೊಂಡ 25 ಮಕ್ಕಳನ್ನು ವೈದ್ಯಕೀಯ ಕೇಂದ್ರಗಳಿಗೆ ಸಾಗಿಸಲಾಗಿದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಕುಸಿದ ಕಟ್ಟಡದ ಅವಶೇಷಗಳಡಿ ಸಿಲುಕಿರಬಹುದಾದ ಮಕ್ಕಳು ಹಾಗೂ ಶಾಲಾ ಸಿಬ್ಬಂದಿಗಾಗಿ ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ದುರಂತದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.
ಪ್ರಧಾನಿ ಷರೀಫ್ ಸಂತಾಪ
ದುರಂತದಲ್ಲಿ ಸಂಭವಿಸಿದ ಸಾವುಗಳಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಗಾಯಗೊಂಡವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.






